19ಕ್ಕೆ ಪಲ್ಸ್ ಪೋಲಿಯೋ ಲಸಿಕೆ
ಮೈಸೂರು: ಜಿಲ್ಲೆಯಲ್ಲಿ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ಜ.19ಕ್ಕೆ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ 3,13,161 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈ ಬಗ್ಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ವಿವಿಧ ಇಲಾಖಾ ಅಧಿಕಾರಿಗಳಿಗೆ ಇಂದು ಸೂಚನೆ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅರ್ಚನಾ, ಕಾರ್ಯಕ್ರಮ ಅನುಷ್ಠಾನದಲ್ಲಿ ಯಾವುದೆ ಅಡಚಣೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.ಕಾರ್ಯಕ್ರಮದ ರೂಪುರೇಷೆ ಬಗ್ಗೆ ವಿವರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎಸ್. ಉಮಾ, ಜಿಲ್ಲಾದ್ಯಂತ 1,588 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು, 6,352 ಬೂತ್ ಕಾರ್ಯಕರ್ತರು, 318 ಮೇಲ್ವಿಚಾರಕಿರಯನ್ನು ನಿಯೋಜಿಸಲಾಗುವುದು. 125 ವಾಹನಗಳ ವ್ಯವಸ್ಥೆ ಮಾಡಬೇಕಿದೆ ಎಂದು ತಿಳಿಸಿದರು. ನಂತರದ ಮೂರು ದಿನಗಳು ಲಸಿಕಾ ಕೇಂದ್ರಕ್ಕೆ ಬಾರದೆ ಉಳಿದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ಈ ಅವಧಿಯಲ್ಲಿ ನಿರಂತರ ವಿದ್ಯುತ್ ಪೂರೈಕೆ ಇರುವಂತೆ ಸೆಸ್ಕ್ ಅಧಿಕಾರಿಗಳಿಗೆ ತಿಳಿಸಲಾಯಿತು.ಅಂಗನವಾಡಿ ಕಾರ್ಯಕರ್ತೆಯರನ್ನು ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ನಿಯೋಜಿಸುವಂತೆ ಹಾಗೂ ಅಂಗನವಾಡಿ ಕೇಂದ್ರಗಳನ್ನು ತೆರೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ಕೊಠಡಿಗಳನ್ನು ಪಲ್ಸ್ ಪೋಲಿಯೋ ಕಾರ್ಯಕ್ರಮದ ದಿನದಂದು ತೆರೆದಿಡಲು ಹಾಗೂ ವಿದ್ಯಾರ್ಥಿಗಳ ಮೂಲಕ ಪೋಲಿಯೋ ಲಸಿಕಾ ದಿನದಂದು ಪೋಷಕರಿಗೆ ಮಾಹಿತಿ ನೀಡಲು ವ್ಯವಸ್ಥೆ ಮಾಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ವಿವಿಧ ಇಲಾಖಾ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಇದ್ದರು.