ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ
ಎಚ್.ಡಿ. ಕೋಟೆ: ತಾಲೂಕಿನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ನ್ಯಾಯಾಧೀಶ ಹನುಮಂತರಾಜ್ ಆತಂಕ ವ್ಯಕ್ತಪಡಿಸಿದರು.
ಪಟ್ಟಣದ ಶಿವಾಜಿ ರಸ್ತೆಯಲ್ಲಿರುವ ಸ್ವಯಂ ಸಿದ್ದಿ ಭವನದಲ್ಲಿ ಸೋಮವಾರ ಮಕ್ಕಳ ಮತ್ತು ಶಿಶು ಕಲ್ಯಾಣಾಭಿವೃದ್ಧಿ ಇಲಾಖೆ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆ ಕಾಯಿದೆಯ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಸಾಕ್ಷರತಾ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಪುರುಷರು ತಮ್ಮ ಹೆಣ್ಣು ಮಕ್ಕಳು ಸ್ವತಂತ್ರವಾಗಿದ್ದಾರೆ ಎಂದು ಹೆಳುತ್ತಾರೆ. ಆದರೆ ಪುರುಷರು ಇದುವರೆಗೂ ಮಹಿಳೆಯರಿಗೆ ಸ್ವಾತಂತ್ರ್ಯ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಆಸ್ತಿ ವೈಷಮ್ಯದ ಬಗ್ಗೆ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ತಂದೆ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೂ ಪಾಲಿದೆ. ಆದರೆ ಅದು ಅವಶ್ಯಕತೆ ಇದ್ದರೆ ಮಾತ್ರ ಪಡೆಯುವುದು ಒಳಿತು ಎಂದು ತಿಳಿಸಿದರು.
ತಾಲೂಕಿನಲ್ಲಿ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳು ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗೋ ಅಥವಾ ಪೊಲೀಸ್ ಠಾಣೆಗೋ ಅದು ಹಾಗಾದಿದ್ದ ಪಕ್ಷದಲ್ಲಿ ತಮ್ಮ ಗಮನಕ್ಕೆ ತರುವಂತೆ ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ಡಿ.ಆರ್. ಮಹೇಶ್ ಮಾತನಾಡಿ, ತಾಲೂಕಿನಲ್ಲಿ ನಡೆದ ಮದುವೆಗಳನ್ನು ದಯವಿಟ್ಟು ನೋಂದಣಾಧಿಕಾರಿಗಳ ಗಮನಕ್ಕೆ ತಂದು ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡರೆ ಮುಂದಾಗುವ ದುಷ್ಪರಿಣಾಮಗಳು ಕಡಿಮೆಯಾಗುತ್ತವೆ. ಕಾನೂನು ಹಾಗೂ ಇನ್ನಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ಬೇಕಿದ್ದಲ್ಲಿ ತಮ್ಮಲ್ಲಿ ಬಂದರೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ವಕೀಲ ಸಂಘದ ಉಪಾಧ್ಯಕ್ಷ ಚೌಡಳ್ಳಿ ಜಯರಯ್ಯ, ಮಧು, ಸಿಡಿಪಿಒ ರಾಮಕೃಷ್ಣಯ್ಯ, ಅಂಗನವಾಡಿ ಕಾರ್ಯಕರ್ತರು ಇದ್ದರು.