ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಸಿಎಂ ಭರವಸೆ
ಮೈಸೂರು: ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರಿ ಅತಿಥಿಗೃಹದಲ್ಲಿ ಮಂಗಳವಾರ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಈಗಾಗಲೇ ಅಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿದ್ದಾರೆ. ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು, ಲೋಕೋಪಯೋಗಿ ಸಚಿವರು, ಲೋಕಸಭಾ ಸದಸ್ಯರು, ಸ್ಥಳೀಯ ಶಾಸಕರು, ಇನ್ನಿತರ ಜನಪ್ರತಿನಿಧಿಗಳು, ಮುಖಂಡರು ಹಾಗೂ ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ನಂತರ ಸಭೆ ನಡೆಸಿ, ಸಮಗ್ರ ಅಭಿವೃದ್ಧಿಯ ಬಗ್ಗೆ ಪೂರ್ಣ ವರದಿ ಸಲ್ಲಿಸುವಂತೆ ತಿಳಿಸಿದರು. ದೇವಸ್ಥಾನದ ಬಳಿ ಸರಿಯಾಗಿ ಕಸ ವಿಲೇವಾರಿಯಾಗುತ್ತಿಲ್ಲ ಎಂದು ಸಭೆಯಲ್ಲಿ ಹಾಜರಿದ್ದ ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದಾಗ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ದೇವಸ್ಥಾನದ ಸುತ್ತವಿರುವ ಕಸವನ್ನು ಪ್ರತಿದಿನ ವಿಲೇವಾರಿ ಮಾಡಲು ನಗರ ಪಾಲಿಕೆಯವರು ಅಗತ್ಯ ಕ್ರಮ ಕೈಗೊಳ್ಳಬೇಕು. ಕಸ ವಿಲೇವಾರಿಗೆ ಸರಿಯಾಗಿ ವಾಹನ ನಿಯೋಜಿಸಬೇಕು. ಬಯೋಗ್ಯಾಸ್ ಸ್ಥಾವರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು. ಜಿಲ್ಲಾಧಿಕಾರಿ ಸಿ. ಶಿಖಾ ಮಾತನಾಡಿ, ದೇವಸ್ಥಾನ ಅಭಿವೃದ್ಧಿಗಾಗಿ ಅಂದಾಜು 37 ಕೋಟಿಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಿದೆ. ಚಾಮುಂಡಿಬೆಟ್ಟದಲ್ಲಿ 8 ಎಕರೆ ಭೂಮಿಯನ್ನು ಗುರುತಿಸಿದ್ದು, ಈ ಸ್ಥಳದಲ್ಲಿ 20 ಕೋಟಿ ವೆಚ್ಚದಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್, ಡಾರ್ಮೆಟರಿ, ಶೌಚಾಲಯಗಳು, 100 ಅಂಗಡಿಗಳ ಮಳಿಗೆಗಳನ್ನು ನಿರ್ಮಿಸಲಾಗುವುದು. 1.50 ಕೋಟಿ ರು. ವೆಚ್ಚದಲ್ಲಿ ದೇವಿಕೆರೆಯನ್ನು ದುರಸ್ತಿ ಕೆಲಸ ಹಾಗೂ ವಿದ್ಯುದ್ದೀಕರಣಗೊಳಿಸಲು, ಚಾಮುಂಡಿ ಬೆಟ್ಟದ ಮೆಟ್ಟಿಲುಗಳಿಗೆ ಚಾವಣಿ ಆಳವಡಿಸಲು ಸಹ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಒಂದು ಕೋಟಿ ರು. ವೆಚ್ಚದಲ್ಲಿ 100 ನೇರ ಪ್ರವೇಶ, 30 ವಿಶೇಷ ಪ್ರವೇಶ ಹಾಗೂ ಉಚಿತ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಮಹಾದ್ವಾರದಲ್ಲಿಯೇ ಪ್ರತ್ಯೇಕ ಪ್ರವೇಶ ಕಲ್ಪಿಸಲು ಸ್ಟೈನ್ಲೆಸ್ ಸ್ಟೀಲ್ ರೈಲಿಂಗ್ಸ್ಗಳನ್ನು ಆಳವಡಿಸುವ ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆ ರೂಪಿಸಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಶ್ರೀನಿವಾಸಪ್ರಸಾದ್, ಲೋಕೋಪಯೋಗಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಎಚ್. ವಿಶ್ವನಾಥ್, ಶಾಸಕ ವಾಸು ಭಾಗವಹಿಸಿದ್ದರು.