ಮಾರ್ಚ್ ವೇಳೆಗೆ ಗುರಿ ಸಾಧಿಸಿ: ಅಮಿತಾ
ಮೈಸೂರು: 2013-14ನೇ ಸಾಲಿಗೆ ಎಲ್ಲ ಇಲಾಖೆಗಳಲ್ಲಿ ರೂಪಿಸಲಾಗಿರುವ ಯೋಜನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ ಗುರಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಅಮಿತಾಪ್ರಸಾದ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿ, ಅಧಿಕಾರಿಗಳು ತಮ್ಮ ಅಧೀನ ಕಚೇರಿ, ವಿದ್ಯಾರ್ಥಿನಿಲಯ, ಶಾಲೆ, ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರತಿ ತಾಲೂಕುಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ತಮ್ಮ ತಾಲೂಕುಗಳಲ್ಲಿರುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ನೀಡಬೇಕು ಎಂದರು.
ಆರ್ಥಿಕ ಸಾಲಿನಲ್ಲಿ ನಿಗದಿಪಡಿಸುವ ಯೋಜನೆಗಳ ಜೊತೆಯಲ್ಲಿ ಅಧಿಕಾರಿಗಳು ಜನಪರವಾದ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಬೇಕು. ಜಿಲ್ಲೆಯಲ್ಲಿ ಸಕಾರತ್ಮಕ ಬದಲಾವಣೆಯೊಂದಿಗೆ ಕೀರ್ತಿ ತರಬೇಕು. ಸಾವಯವ ಕೃಷಿ, ಮಣ್ಣಿನ ಸಂರಕ್ಷಣೆ, ಸೌರಶಕ್ತಿಯ ಬಳಕೆ, ರೈತರ ಆರ್ಥಿಕ ಸ್ಥಿತಿ ಸುಧಾರಿಸುವ ಬದಲಿ ಬೆಳೆಗಳು ಮುಂತಾದ ಯೋಜನೆಗಳ ಬಗ್ಗೆ ಚಿಂತನೆ ನಡೆಸಿ ಎಂದರು. ಮನಸ್ವಿನಿ ಯೋಜನೆಗೆ ಗ್ರಾಮೀಣ ಪ್ರದೇಶದಿಂದ ಅರ್ಜಿ ಬರುತ್ತಿದ್ದು, ಈ ಯೋಜನೆಯನ್ನು ಪರಿಣಾಮಕಾರಿಯಾಗಿ ನಗರ ಪ್ರದೇಶದಲ್ಲಿ ಅನುಷ್ಠಾನಗೊಳಿಸುವ ಅವಶ್ಯಕತೆ ಇದೆ. ನಗರ ಪ್ರದೇಶದಲ್ಲಿ ಈ ಯೋಜನೆಯ ಪ್ರಚಾರಗೊಳಿಸಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧವಾಗಲು ಮೂರು ಪೂರ್ವಭಾವಿ ಸಿದ್ಧತಾ ಪರೀಕ್ಷೆ ನಡೆಸಬೇಕು. ವಿಶೇಷ ತರಗತಿಗಳನ್ನು ಆಯೋಜಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದರು.
ಸಮಾಜ ಕಲ್ಯಾಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳು ನಡೆಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಸೇರಿಕೊಂಡು ಶ್ರಮದಾನ ಮಾಡಿದರೆ ವಿದ್ಯಾರ್ಥಿಗಳಲ್ಲಿ ಶ್ರಮದಾನ ಪ್ರವೃತ್ತಿಯನ್ನು ಬೆಳೆಸಬಹುದು ಎಂದರು.
ಜಿಲ್ಲಾಧಿಕಾರಿ ಸಿ.ಶಿಖಾ ಮಾತನಾಡಿ, ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಪ್ರತಿ ಗುರುವಾರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ. ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಹಾಗೂ ಹುಣಸೂರು ತಾಲೂಕುಗಳಲ್ಲಿ ಕಳೆದ ಎರಡು ತಿಂಗಳಿಂದ ಮಳೆಯ ಕೊರತೆ ಕಂಡು ಬಂದಿರುತ್ತದೆ. ಈ ತಾಲೂಕುಗಳಿಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದರು.
ಎಸ್ಪಿ ಅಭಿನವ್ ಖರೆ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿಪಂ ಸಿಇಒ ಪಿ.ಎ.ಗೋಪಾಲ್ ಹಾಗೂ ಅಧಿಕಾರಿಗಳು ಇದ್ದರು.