ಗುತ್ತಿಗೆ ಪೌರಕಾರ್ಮಿಕ ಪದ್ಧತಿ ರದ್ದಾಗಲಿ
ಮೈಸೂರು: ಪೌರಕಾರ್ಮಿಕರು ರಾಜ್ಯಾದ್ಯಂತ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದು ಕೂಡಲೇ ಈ ಪದ್ಧತಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.
ಇತ್ತೀಚೆಗೆ ಮಹಾಸಂಘದ ರಾಜ್ಯಾಧ್ಯಕ್ಷ ನಾರಾಯಣ, ಮಾಜಿ ಮೇಯರ್ ಅನಂತ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ಸರ್ಕಾರಕ್ಕೆ ಮನವಿ ಸಲ್ಲಿಸಿತು. ಪೌರಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳೇ ಭರಿಸಬೇಕು. ಆರೋಗ್ಯ ರಕ್ಷಣೆ ನೀಡಬೇಕು. ಪೌರಕಾರ್ಮಿಕರ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ನೀಡಬೇಕು. ವಸತಿರಹಿತ ಪೌರಕಾರ್ಮಿಕರಿಗೆ ನಿವೇಶನ ಅಥವಾ ವಸತಿ ನೀಡಬೇಕು. ಎಲ್ಲ ಜಿಲ್ಲೆಗಳಲ್ಲಿ ವಸತಿ ಶಾಲೆ ಆರಂಭಿಸಬೇಕು. ಒಳಚರಂಡಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಲಾಯಿತು.
ಮನವಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆ ಪ್ರಣಾಳಿಕೆ ಮತ್ತು ಬಜೆಟ್ ಭಾಷಣದಲ್ಲಿ ಗುತ್ತಿಗೆ ಪದ್ಧತಿಯನ್ನು ರದ್ದು ಮಾಡಲು ಘೋಷಿಸಿದ್ದೇವೆ. ಈ ಬಗ್ಗೆ ಪ್ರಸ್ತಾವನೆ ತಯಾರಿಸಿ ಸಚಿವ ಸಂಪುಟದ ಮುಂದಿಡುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದರು.