ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲೇ ಸ್ಪರ್ಧೆ
ಸುತ್ತೂರು: ಸತತ 6ನೇ ಬಾರಿಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅನಂತಕುಮಾರ್ ಸ್ಪಷ್ಟಪಡಿಸಿದರು.
ಸುತ್ತೂರು ಜಾತ್ರೆಯಲ್ಲಿ ಮಂಗಳವಾರ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರತಿ ವರ್ಷವೂ ಊಹಾಪೋಹಗಳು ಬರುತ್ತಿರುತ್ತವೆ. ಆದರೆ, ಈ ಬಾರಿಯೂ ಸಹ ಅದೇ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದರು. ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಿದೆ. ಈ ಪಟ್ಟಿ ಪರಿಶೀಲಿಸಿದ ಬಳಿಕ ದೇಶಾದ್ಯಂತ 3-4 ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು. ಈ ಬಾರಿ ಚುನಾವಣೆಯಲ್ಲಿ ಮುಕ್ತ ಅವಕಾಶವಿದೆ. ಬಿಜೆಪಿ ಮಿತ್ರ ಪಕ್ಷಗಳು ಸ್ಪರ್ಧಿಸುವ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ ಸಂಸದರು, ಪ್ರಮುಖರು, ಜೊತೆಗೆ ಗಣ್ಯರು, ಹೊಸ ಮುಖಗಳು, ಯುವಕರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದುತಿಳಿಸಿದರು. ಫೆ.23 ರಂದು ತುಮಕೂರಿನಲ್ಲಿ ಆಯೋಜಿಸಲಾಗಿರುವ ಬಿಜೆಪಿ ಪರಿಶಿಷ್ಟರ ಮತ್ತು ಹಿಂದುಳಿದ ವರ್ಗದ ಸಮಾವೇಶವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಉದ್ಘಾಟಿಸುವರು ಎಂದು ಹೇಳಿದರು.