ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಅಡ್ಡಿ

Rashmi Kasaragodu
Updated On : 30 Jan 2014, 1:31 am

ಕ.ಪ್ರ.ವಾರ್ತೆ    ಮೈಸೂರು    ಜ. 29
ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾನಸ ಗಂಗೋತ್ರಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವು ಜೆಎಲ್ಬಿ ರಸ್ತೆಯ ಎಂಜಿನಿಯರುಗಳ ಸಂಸ್ಥೆಯ ಎಸ್.ಪಿ. ಭಟ್ ಹಾಲ್ಗೆ ಸ್ಥಳಾಂತರವಾಯಿತು.
ರಾಣಿ ಬಹದ್ದೂರ್ ಸಭಾಂಗಣದಲ್ಲಿ ಬುಧವಾರ ಅರ್ಥಕ್ರಾಂತಿ ಕುರಿತು ಸಂವಾದ ಕಾರ್ಯಕ್ರಮವನ್ನು ನಮೋ ಬ್ರಿಗೇಡ್ ಹಮ್ಮಿಕೊಂಡಿತ್ತು. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಬೇಕೆಂಬ ಉದ್ದೇಶದಿಂದ ನಮೋ ಬ್ರಿಗೇಡ್ ಸಂಸ್ಥೆ ಹುಟ್ಟಿಕೊಂಡಿದೆ. ಹೀಗಾಗಿ ರಾಜಕೀಯ ಪ್ರೇರಿತ ಕಾರ್ಯಕ್ರಮಕ್ಕೆ ಮೈಸೂರು ವಿವಿ ಆವರಣದಲ್ಲಿ ಅವಕಾಶ ನೀಡಿರುವುದು ಸರಿಯಲ್ಲ ಎಂದು ಮೈಸೂರು ವಿವಿ ದಲಿತ ವಿದ್ಯಾರ್ಥಿ ಒಕ್ಕೂಟ ಮತ್ತು ಸಂಶೋಧಕರ ಸಂಘದವರು ಖಂಡಿಸಿದರು.
ನಮೋ ಬ್ರಿಗೇಡ್ನವರು ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಪ್ರಧಾನಿ ಆಗಬೇಕೆಂಬ ಅಂಶಗಳಿರುವ ಕರಪತ್ರಗಳನ್ನು ತಂದಿದ್ದಾರೆ. ಶೈಕ್ಷಣಿಕ ಕಾರ್ಯಕ್ರಮಗಳು ನಡೆಯಬೇಕಾದ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ ಅವರು, ಮೈಸೂರು ವಿವಿ ಕುಲಸಚಿವರು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು.
ಪರಿಶೀಲಿಸಿ ಕ್ರಮ: ಸ್ಥಳಕ್ಕೆ ಆಗಮಿಸಿದ ಮೈಸೂರು ವಿವಿ ಕುಲಸಚಿವ ಪ್ರೊ.ಸಿ. ಬಸವರಾಜು ಅವರು, ಶೈಕ್ಷಣಿಕ ಕಾರ್ಯಕ್ರಮಕ್ಕಾಗಿ ಎಂದು ನಮೋ ಬ್ರಿಗೇಡ್ ಸಭಾಂಗಣ ಪಡೆದುಕೊಂಡಿದ್ದಾರೆ. ರಾಜಕೀಯ ಪ್ರೇರಿತ ಕಾರ್ಯಕ್ರಮಗಳಿಗೆ ವಿವಿ ಅವಕಾಶ ನೀಡುವುದಿಲ್ಲ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಅರುಣ್ಕುಮಾರ್, ಸಂಶೋಧಕರ ಸಂಘದ ರಘು ನೇತೃತ್ವ ವಹಿಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ನಮೋ ಬ್ರಿಗೇಡ್ನವರು ರಾಣಿ ಬಹದ್ದೂರ್ನಿಂದ ಜೆಎಲ್ಬಿ ರಸ್ತೆಯಲ್ಲಿರುವ ಎಂಜಿನಿಯರುಗಳ ಸಂಸ್ಥೆಯ ಸಭಾಂಗಣಕ್ಕೆ ಕಾರ್ಯಕ್ರಮ ಸ್ಥಳಾಂತರಿಸಿದರು.
ಯುವ ಕಾಂಗ್ರೆಸ್ ಕಾರ್ಯಕರ್ತರು: ಎಂಜಿನಿಯರುಗಳ ಸಂಸ್ಥೆ ಸಭಾಂಗಣದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಅವಕಾಶ ನೀಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಹ ಪ್ರತಿಭಟಿಸಿದರು.
ಅರ್ಥಕ್ರಾಂತಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಎಂಜಿನಿಯರುಗಳ ಸಂಸ್ಥೆ ಕಚೇರಿಗೆ ಧಾವಿಸಿದ ಕಾರ್ಯಕರ್ತರು, ಕಾರ್ಯಕ್ರಮಕ್ಕೆ ಅವಕಾಶ ನೀಡಿರುವ ಬಗ್ಗೆ ಪ್ರಶ್ನಿಸಿದರು. ಇದರಿಂದ ಎಚ್ಚೆತ್ತ ಕಾರ್ಯಕ್ರಮ ಆಯೋಜಕರು ಅರ್ಥಕ್ರಾಂತಿ ರೂವಾರಿ, ಉದ್ಯಮಿ ಅನಿಲ್ ಬೋಕಿಲ್ ಅವರ ಸಂವಾದ ಮೊಟಕುಗೊಳಿಸಿ ಕಾರ್ಯಕ್ರಮವನ್ನು ಮುಗಿಸಿದರು.
ಈ ವೇಳೆ ಹೊರ ಬಂದ ಕೆಲವು ನಮೋ ಬ್ರಿಗೇಡ್ ಕಾರ್ಯಕರ್ತರು ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕೆ ಇಳಿದರು. ಈ ವೇಳೆ ಲಕ್ಷ್ಮಿಪುರಂ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದರು. ನಮೋ ಬ್ರಿಗೇಡ್ ಕಾರ್ಯಕರ್ತರು ತೆರಳಿದ ಮೇಲೆ ಬೀಗ ಜಡಿದ ಸಭಾಂಗಣದ ಎದುರು ಕೆಲ ಹೊತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.
ನಮೋ ಬ್ರಿಗೇಡ್ ಹೆಸರಿನಲ್ಲಿ ಮೈಸೂರಿನಲ್ಲಿ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತಿವೆ. ಯುವ ಜನತೆಯಲ್ಲಿ ಪ್ರಚೋದನೆ ಮೂಡಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಯುವ ಕಾಂಗ್ರೆಸ್ ಮುಖಂಡರಾದ ಸೋಮಶೇಖರ್, ಸಿ.ಎಸ್. ರಘು, ಯೋಗಾನಂದ, ಸುರೇಶ್, ರಾಜೇಶ್, ಸ್ವಾಮಿ, ಇಮ್ರಾನ್, ದೀಪಕ್, ಶರ್ತಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement