ಶಿವಕುಮಾರ್ ಕುಟುಂಬಕ್ಕೆ ಪರಿಹಾರ: ಆಗ್ರಹ
ಮೈಸೂರು: ಟಿ.ನರಸೀಪುರ ತಾಲೂಕು ಕೊತ್ತೇಗಾಲದಲ್ಲಿ ಆತ್ಮಹತ್ಯೆಗೆ ಶರಣಾದ ಜೀತದಾಳುವಿನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಒತ್ತಾಯಿಸಿದೆ. ಘಟನೆಗೆ ಸಂಬಂಧಿಸಿದಂತೆ ದಲಿತ ಮುಖಂಡರ ಮೇಲೆ ಹೂಡಲಾದ ಸುಳ್ಳು ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು. ದಲಿತ ವಿರೋಧಿ ಧೋರಣೆ ಅನುಸರಿಸುತ್ತಿರುವ ತಹಸೀಲ್ದಾರ್ ಅವರನ್ನು ಅಮಾನತುಗೊಳಿಸಬೇಕು. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಆರೋಪಿಗಳನ್ನು ಬಂಧಿಸುವಂತೆ ಎಂದು ಸಿಪಿಐಎಂ ಜಿಲ್ಲಾ ಸಮಿತಿ ಆಗ್ರಹಿಸಿದೆ. ಟಿ. ನರಸೀಪುರದಲ್ಲಿ ದಲಿತ ಸಂಘರ್ಷ ಸಮಿತಿ ಕಳೆದೆರಡು ದಿನಗಳಿಂದ ನಡೆಸುತ್ತಿರುವ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಬೆಂಬಲ ಸೂಚಿಸಿದೆ. ಕೊತ್ತೇಗಾಲ ನಿವಾಸಿ ಶಿವಕುಮಾರ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ನೊಂದ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ರೈತ ಸಂಘದ ಹೊಸೂರು ಕುಮಾರ್ ಮತ್ತು ಹೊಸಕೋಟೆ ಬಸವರಾಜು ಒತ್ತಾಯಿಸಿದ್ದಾರೆ.