ಸಮಸ್ಯೆ ಎದುರಿಸುವ ಸಾಮರ್ಥ್ಯ ಮಹಿಳೆಯರು ಬೆಳೆಸಿಕೊಳ್ಳಲಿ
ಮೈಸೂರು: ಸಮಾಜದಲ್ಲಿ ಬರುವ ತೊಡಕುಗಳನ್ನು ಎದುರಿಸುವ ಸಾಮರ್ಥ್ಯವನ್ನು ಮಹಿಳೆಯರು ಬೆಳೆಸಿಕೊಳ್ಳಬೇಕೆಂದು ಮೈಸೂರು ಆಕಾಶವಾಣಿಯ ಉಪ ನಿರ್ದೇಶಕ ಆನಂದ್ ವಿ. ಪಾಟೀಲ್ ಹೇಳಿದರು.
ನಗರದ ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಕಾರಂಜಿ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಂಶೋಧನಾ ನಿಯತಕಾಲಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹತ್ತಿರವಾಗುವುದಕ್ಕೆ ಇಂತಹ ಕಾರ್ಯಕ್ರಮ ಮುಖ್ಯವಾದವು, ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪೂರಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ರೋಟರಿ ಸಂಸ್ಥೆಯ ರಾಮದಾಸ್ ಮಾತನಾಡಿದರು. ಕಾಲೇಜಿನ ಶೈಕ್ಷಣಿಕ ಡೀನ್ ಡಾ. ಎಚ್.ಸಿ. ಹೊನ್ನಪ್ಪ ಕಾಲೇಜಿನಿ ಕಿರು ಪರಿಚಯವನ್ನು ನೀಡಿದರು. ಪ್ರಥಮ ಪದವಿ ವಿದ್ಯಾರ್ಥಿನಿಯರಿಗೆ ಸಾಂಕೇತಿಕವಾಗಿ ಪುಷ್ಪ ನೀಡಿ ಸ್ವಾಗತಿಸಿದರು. ಇದೇ ವೇಳೆ ಪ್ರಥಮ ಪದವಿ ವಿದ್ಯಾರ್ಥಿನಿಯರು ತಮ್ಮ ಅನಿಸಿಕೆ ಹಂಚಿಕೊಂಡರು.
ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಹೆಚ್ಚುವರಿ ನಿರ್ದೇಶಕ ಮೃತ್ಯುಂಜಯ ಪಿ. ಕುಳೇನೂರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿನಿಯರು ಇದ್ದರು.