ಮರ ಬೆಳೆಸಿ ಪರಿಸರ ಸಂರಕ್ಷಿಸಿ
ಟಿ. ನರಸೀಪುರ: ಮನೆಗೊಂದು ಮರ, ಊರಿಗೊಂದು ವನವನ್ನು ಮಾಡಿ ಪರಿಸರ ಸಂರಕ್ಷಣೆ ಮಾಡಬೇಕೆಂದು ತಹಸೀಲ್ದಾರ್ ಎಚ್. ರಾಮಪ್ಪ ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ವಿನಾಶ ಪ್ರಪಂಚಕ್ಕೆ ದೊಡ್ಡ ಗಂಡಾಂತರ, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಕೊಡುಗೆ ನೀಡಬೇಕೆಂದು ತಿಳಿಸಿದರು. ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಸಿ.ವಿ.ವಿಶ್ವನಾಥ್ ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಒಂದು ದಿನದಲ್ಲಿ ಬದಲಾಯಿಸಲು ಸಾಧ್ಯವಿಲ್ಲ. ಇದು ನಿರಂತರ ಪ್ರಕ್ರಿಯೆ ಆಗಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿಯನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಹೇಳಿದರು. ಪರಿಸರ ಸಂರಕ್ಷಣೆ ಬಗ್ಗೆ ಉತ್ತಮವಾಗಿ ವಿಚಾರ ಮಂಡಿಸಿದ ಶಾಲೆಯ ವಿದ್ಯಾರ್ಥಿನಿ ಐಶ್ವರ್ಯಗೆ ಬಹುಮಾನ ವಿತರಿಸಿದರು. ಪ್ರಾಂಶುಪಾಲ ಚಂದ್ರಶೇಖರ್ ರಾವ್ ಇದ್ದರು.