ಬಾಲಕಾರ್ಮಿಕ ಪದ್ಧತಿ ತಡೆಗೆ ಪೋಷಕರ ಪಾತ್ರ ಮುಖ್ಯ
ನಂಜನಗೂಡು: ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ರಕ್ಷಿಸಲು ಮತ್ತು ಪದ್ಧತಿ ನಿರ್ಮೂಲನೆ ಮಾಡುವ ಜವಾಬ್ದಾರಿ ಪೋಷಕರು ಹಾಗೂ ಸಂಬಂಧಪಟ್ಟ ಇಲಾಖೆಗಳ ಮೇಲಿದೆ ಎಂದು ಸಿವಿಲ್ ನ್ಯಾ. ಮಂಜುನಾಥ್ ಹೇಳಿದರು. ಗುರುವಾರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಇಲಾಖೆಗಳು ಸಂಯುಕ್ತವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಕಡ್ಡಾಯ ಶಿಕ್ಷಣ ರೂಪಿಸಿ ಬಿಸಿಯೂಟ, ಹಾಲು, ಸಮವಸ್ತ್ರ, ಇನ್ನಿತರ ಸೌಲಭ್ಯಗಳನ್ನು ನೀಡುತ್ತಿದೆ. ಇದನ್ನು ಬಳಸಿಕೊಂಡು ಎಲ್ಲರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು. ತಾಲೂಕು ಕಾರ್ಮಿಕ ನಿರೀಕ್ಷ ಎಂ.ಆರ್.ಮೋಹನಕುಮಾರ್ ಮಾತನಾಡಿ, ತಾಲೂಕಿನಲ್ಲಿ ಇದುವರೆಗೂ 1200 ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದರು. ಪ್ರಧಾನ ಸಿವಿಲ್ ನ್ಯಾ.ಶಾರದಾದೇವಿ ಸಿ.ಹಟ್ಟಿ, ನ್ಯಾ.ಎಸ್. ಶರ್ಮಿಳಾ, ಸಹಾಯಕ ಸರ್ಕಾರಿ ಅಭಿಯೋಜಕಿ ಶಕೀಲಾ ಅಬೂಬ್ಕರ್, ಬಿಇಒ ಪುರುಷೋತ್ತಮ್, ಮೋಹನಕುಮಾರ್ ಇದ್ದರು.