ನಿರಂತರ ವಿದ್ಯುತ್ ಕಾಮಗಾರಿ ಪ್ರಗತಿಯಲ್ಲಿ
ಕೆ.ಆರ್. ನಗರ: ಹಳಿಯೂರು, ಕುಪ್ಪೆ, ಮಾಯಗೌಡನಹಳ್ಳಿ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಏಪ್ರಿಲ್ ಒಳಗೆ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ತಾಲೂಕಿನ ಮಾಯಗೌಡನಹಳ್ಳಿ ಗ್ರಾಪಂ ಆವರಣದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿ ಮಾತನಾಡಿದ ಅವರು, 29 ಕೋಟಿ ವೆಚ್ಚದಲ್ಲಿ ಮಾಯಗೌಡನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಿಗೆ ಕಾವೇರಿ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿಗೂ ಶೀಘ್ರ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಪಂಚಾಯ್ತಿ ವತಿಯಿಂದ ಆಶ್ರಯ ಮನೆಗಳನ್ನು ವಿತರಿಸುವಾಗ ಮತ್ತು ಅಭಿವೃದ್ಧಿ ಕೆಲಸಗಳನ್ನು ಮಾಡುವಾಗ ಅಭಿವೃದ್ಧಿ ಅಧಿಕಾರಿಗಳು, ಪಂಚಾಯ್ತಿ ಅಧ್ಯಕ್ಷರು, ಸದಸ್ಯರು ಮತ್ತು ತಾಲೂಕು ಅಧಿಕಾರಿಗಳ ಸಲಹೆ ಪಡೆದು ಅರ್ಹರಿಗೆ ನೀಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜನಸ್ಪಂದನ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಆಶ್ರಯ ಮನೆ, ಪಡಿತರ ಚೀಟಿ, ವಿಧವಾವೇತನ, ವಿಕಲಚೇತನ, ವೃದ್ಧಾಪ್ಯ ವೇತನವನ್ನು ಮಂಜೂರು ಮಾಡಿಸಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಹಾವು ಕಚ್ಚಿ ಮೃತಪಟ್ಟಿದ್ದ ಹಳಿಯೂರು ಗ್ರಾಮದ ರೈತ ಕರೀಗೌಡರ ಪತ್ನಿ ದೇವಮ್ಮ ಅವರಿಗೆ ಕೃಷಿ ಇಲಾಖೆಯ ವತಿಯಿಂದ ನೀಡಿದ 1 ಲಕ್ಷ ಪರಿಹಾರ ಚೆಕ್ನ್ನು ಶಾಸಕರು ವಿತರಿಸಿದರು.
ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ಮಾಜಿ ಸದಸ್ಯ ಡಿ.ಎಸ್. ಜಗದೀಶ್, ತಾಪಂ ಅಧ್ಯಕ್ಷೆ ಶಶಿಕಲಾ ರಮೇಶ್, ಮಾಜಿ ಉಪಾಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಗ್ರಾಪಂ ಅಧ್ಯಕ್ಷ ಮೂರ್ತಿ, ಮಾಜಿ ಉಪಾಧ್ಯಕ್ಷ ದಮ್ಮನಹಳ್ಳಿ ಜಗದೀಶ್, ಸದಸ್ಯ ಮಲ್ಲಿಕಾರ್ಜುನ, ತಾಪಂ ಇಒ ಎಚ್.ಎಂ. ಸಿದ್ದಲಿಂಗಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಶಿವಪ್ರಸಾದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಂಗಸ್ವಾಮಿ, ಕೆ.ಬಿ. ಪ್ರಕಾಶ್, ಸತೀಶ್, ಅರ್ಕೇಶ್, ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರ್, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ನಾಗೇಶ್ ಇದ್ದರು.