ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಡ್ಡಾಯ ಮತದಾನ ಮಾಡಲು ಅರಿವು ಮೂಡಿಸಿ: ಸಿಇಒ

Mainashree
Updated On : 18 Mar 2014, 11:34 am

ಮೈಸೂರು: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮತದಾನದ ಹಕ್ಕನ್ನು ನೀಡಿದ್ದು, ಇದನ್ನು ನಾಗರಿಕರು ತಮ್ಮ ಕರ್ತವ್ಯ ಎಂದು ಪರಿಗಣಿಸಿ ತಪ್ಪದೇ ಮತದಾನ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸ್ವೀಪ್ ಕಾರ್ಯಕ್ರಮಗಳನ್ನು ಚುರುಕುಗೊಳಿಸಬೇಕೆಂದು ಜಿಪಂ ಸಿಇಒ ಪಿ.ಎ. ಗೋಪಾಲ್ ಹೇಳಿದರು.
ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಮತದಾರರ ಜಾಗೃತಿ ಹಾಗೂ ಸಹಭಾಗಿತ್ವ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೆಹರು ಯುವ ಕೇಂದ್ರ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯವರು ಯುವ ಸಂಘಗಳನ್ನು ಸಂಘಟಿಸಿ ಜಿಲ್ಲೆಯಲ್ಲಿ ನಡೆಯುವ ಸಭೆ, ಸಮಾರಂಭಗಳಲ್ಲಿ ಯುವ ಸಂಘಗಳೊಂದಿಗೆ ಭಾಗವಹಿಸಿ ಸಾರ್ವಜನಿಕರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸುವಂತೆ ತಿಳಿಸಿದರು.
ವಿದ್ಯಾರ್ಥಿಗಳ ಮೂಲಕ ಪೋಷಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ತಮ್ಮ ಪೋಷಕರಿಗೆ ವಿವರಿಸಿ, ಏ.17ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಗೆ ತೆರಳಿ ತಪ್ಪದೇ ಮತದಾನ ಮಾಡಲು ಪ್ರೇರೇಪಿಸಿ ಅವರಿಂದ ಸಹಿ ಪಡೆಯಬೇಕು. ಈ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಗತ್ಯ ಕ್ರಮ ವಹಿಸುವಂತೆ ಹೇಳಿದರು.
ಬ್ಯಾಂಕ್ ವ್ಯವಹಾರಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಲು ಜಿಲ್ಲೆಯಲ್ಲಿರುವ ಬ್ಯಾಂಕ್‌ಗಳಲ್ಲಿ ಭಿತ್ತಿಪತ್ರವನ್ನು ಪ್ರದರ್ಶಿಸಲು ಕ್ರಮವಹಿಸುವಂತೆ ಲೀಡ್ ಬ್ಯಾಂಕ್‌ನ ವ್ಯವಸ್ಥಾಪಕರಿಗೆ ತಿಳಿಸಿದರು.
ಜಾಗೃತಿ ಸಂದೇಶ ಇರಲಿ: ಆಸ್ಪತ್ರೆಗಳಲ್ಲಿ ನೀಡಲಾಗುವ ಹೊರರೋಗಿಗಳ ಚೀಟಿಗಳ ಮೇಲೆ ಹಾಗೂ ಕೆಎಂಎಫ್‌ನ ಹಾಲಿನ ಪ್ಯಾಕೆಟ್‌ಗಳ ಮೇಲೆ ಮತದಾನ ಜಾಗೃತಿ ಸಂದೇಶಗಳನ್ನು ಮುದ್ರಿಸುವಂತೆ ತಿಳಿಸಿದರು.
ಪ್ರಜಾಪ್ರಭುತ್ವದಲ್ಲಿ ಸುಭದ್ರ ಸರ್ಕಾರ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೆ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು. ಮತದಾರರು ಯಾವುದೇ ಒತ್ತಡಕ್ಕೆ ಮಣಿಯದೆ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಮೂಡಿಸಲು ವಾರ್ತಾ ಇಲಾಖೆಯ ಗ್ರಾಮವಾಹಿನಿಯ ಮೂಲಕ ಪ್ರಚಾರ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪುಟ್ಟಸ್ವಾಮಿ, ಜಿಪಂ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ವಯಸ್ಕರ ಶಿಕ್ಷಣಾಧಿಕಾರಿ ಶಂಕರೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸಪ್ಪ, ಎನ್.ಆರ್. ವಿಜಯ್ ಹಾಗೂ ಅಧಿಕಾರಿಗಳು ಇದ್ದರು.
200 ಮೀ. ನಿರ್ಬಂಧಿತ ಪ್ರದೇಶ
ಮೈಸೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾ.19 ರಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮಾ.19 ರಿಂದ ಏ.17 ರವರೆಗೆ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಜಿಲ್ಲಾಧಿಕಾರಿ ಸಿ.ಶಿಖಾ ಆದೇಶಿಸಿದ್ದಾರೆ. ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲು ಬರುವ ಅಭ್ಯರ್ಥಿಗಳು ಅವರೊಂದಿಗೆ ನಾಲ್ಕು ಜನರು ಬರಲು ಮಾತ್ರ ಅವಕಾಶವಿದೆ. ನಿರ್ಬಂಧಿತ ಪ್ರದೇಶದಲ್ಲಿ ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿರುವ ಅವಧಿಯಲ್ಲಿ ಸಾರ್ವಜನಿಕರು 5 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ನಿರ್ಬಂಧಿಸಲಾಗಿದೆ. ಈ ಆದೇಶವು ಚುನಾವಣಾ ನಿರತ ಅಧಿಕಾರಿ ಮತ್ತು ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement