ಕಾರು- ಲಾರಿ ಡಿಕ್ಕಿ: ಪ್ರಯಾಣಿಕರು ಪಾರು
ತಾಂಡವಪುರ: ನಂಜನಗೂಡು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಗೆ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಬುಧವಾರ ಮಧ್ಯಾಹ್ನ ತಾಂಡವಪುರ ಬಳಿ ಜರುಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನವರಾದ ನಂದಕುಮಾರ್ ಕಾರು ಚಾಲನೆ ಮಾಡುತ್ತಿದ್ದರು. ಕಾರಿನಲ್ಲಿದ್ದ ಬಿ.ಎಂ. ಮುತ್ತಮ್ಮ (45), ಮಿಥುನ್(15) ಹಾಗೂ ಶ್ರೇಣಿಕಾ (13) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ನಂಜನಗೂಡಿನ ತಮ್ಮ ಸಂಬಂಧಿಕರ ಮನೆಗೆ ಬಂದು, ತಮ್ಮ ಊರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದರೂ ಎಲ್ಲರೂ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ನಟರಾಜು ಪ್ರಕರಣ ದಾಖಲಿಸಿಕೊಂಡಿದ್ದಾರೆ