'ಅಲ್ಪಸಂಖ್ಯಾತರಿಗೆ ಬಿಜೆಪಿ ಟಿಕೆಟ್ ನೀಡಿ'
ಸಿಂಧನೂರು: ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ 40 ಸಾವಿರ ಮುಸ್ಲಿಂ ಸಮುದಾಯದ ಮತದಾರರಿದ್ದಾರೆ. ಈ ಬಾರಿಯ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ತಾಲೂಕಾಧ್ಯಕ್ಷ ಖಾಜಾಹುಸೇನ್ ವಕೀಲ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಈವರೆಗಿನ ವಿಧಾನಸಭಾ ಚುನಾವಣೆಗಳಲ್ಲಿ ಯಾವುದೇ ರಾಷ್ಟ್ರೀಯ ಪಕ್ಷಗಳ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡದೆ ಕಡೆಗಣಿಸುತ್ತಾ ಬಂದಿವೆ. ಮಸ್ಲಿಮರು ಸಹ ಸಿಂಧನೂರು ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂದು ಮುಖಂಡರಲ್ಲಿ ಮನವಿ ಮಾಡಿದ್ದಾರೆ.
ವಿದ್ಯುತ್ ಮಿತ ಬಳಕೆಗೆ ಜೆಸ್ಕಾ ಮನವಿ
ರಾಯಚೂರು: ರಾಜ್ಯದಲ್ಲಿ ಬೇಸಿಗೆ ಮತ್ತು ಸದ್ಯ ವಿವಿಧ ಪರೀಕ್ಷೆಗಳ ಹಿನ್ನೆಲೆ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಈ ಪರಿಸ್ಥಿತಿ ನಿಭಾಯಿಸಲು ವಿದ್ಯುತ್ ಮಿತ ಬಳಕೆಗೆ ಆದ್ಯತೆ ನೀಡುವಂತೆ ಜೆಸ್ಕಾಂ ಮನವಿ ಮಾಡಿದೆ. ಈ ಕುರಿತು ಪ್ರಕಟಣೆ ನೀಡಿರುವ ಜೆಸ್ಕಾಂ, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಉಳಿತಾಯ ಕ್ರಮಗಳನ್ನು ಅನುಸರಿಸಬೇಕು. ಮಿತ ಬಳಕೆಯ ವಿಧಾನವನ್ನು ಪಾಲಿಸಬೇಕು. ವಾಣಿಜ್ಯ ಮತ್ತು ಕೈಗಾರಿಕೆ ಸ್ಥಾವರಗಳು ಸಂಜೆ 6ರಿಂದ ರಾತ್ರಿ 10ರವರೆಗೆ ವಿದ್ಯುತ್ ಮಿತವಾಗಿ ಅವಶ್ಯಕತೆಯಿದ್ದಲ್ಲಿ ಮಾತ್ರ ಬಳಸುವಂತೆ ಮನವಿ ಮಾಡಿದ್ದಾರೆ.
ನೀತಿ ಸಂಹಿತೆ ಪಾಲನೆಗೆ ನಿರ್ಲಕ್ಷ್ಯ; ಅಮಾನತು
ರಾಯಚೂರು: ನೀತಿ ಸಂಹಿತೆ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ಅಮಾನತುಗೊಳಿಸಿದ್ದಾರೆ. ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಮಾನ್ವಿ ತಾಲೂಕಿನ ಮಲ್ಲಟ ಗ್ರಾಮದಲ್ಲಿ ಅಳವಡಿಸಿದ್ದ ಸರ್ಕಾರಿ ಮತ್ತು ಖಾಸಗಿ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಉಪತಹಸೀಲ್ದಾರ್ ಮಾಣಿಕ್ಯಮ್ಮ ಮತ್ತು ಗ್ರಾಪಂ ಪಿಡಿಒ ಬಾಲನಗೌಡ ಅವರಿಗೆ ಸೂಚಿಸಲಾಗಿತ್ತು. ಆದರೆ, ಆದೇಶದ ಜಾರಿಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.