ಬಸ್ ಡಿಕ್ಕಿ; ವ್ಯಕ್ತಿ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಕೊಳಬಾಳ ಗ್ರಾಮದಲ್ಲಿ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ಅಮರೇಶ್ ಎಂದು ಗುರುತಿಸಲಾಗಿದೆ.
ಈತ ರಸ್ತೆ ಮೇಲೆ ನಿಂತಿದ್ದಾಗ ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಈತನಿಗೆ ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದ. ಈತನನ್ನು ಕೂಡಲೇ ಸಿಂಧನೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎದೆನೋವು; ಸಾವು
ರಾಯಚೂರು: ಸಿಂಧನೂರು ನಗರದ ಕಾರ್ ವರ್ಕ್ಶಾಪ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತನನ್ನು ಫಾರೂಕ್ ಎಂದು ಗುರುತಿಸಲಾಗಿದೆ. ಈತನಿಗೆ ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಶ್ರೀನಿವಾಸ ಕಾರ್ ಸಲ್ಯೂಶನ್ ಟಾಟಾ ವರ್ಕ್ಶಾಪ್ನಲ್ಲಿ ಪೇಂಟಿಂಗ್ ಕೆಲಸ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಸೇರಿಸುವ ವೇಳೆಗೆ ಆತ ಅಸುನೀಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.