ಮತದಾರರ ಹಕ್ಕು ಜಾಗೃತಿ ಶಿಬಿರ
ರಾಯಚೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಸೇರಿದಂತೆ ವಿವಿಧ ಪದವಿ ಪೂರ್ವ ಕಾಲೇಜುಗಳಲ್ಲಿ ಸಹಾಯಕ ಆಯುಕ್ತೆ ಮಂಜುಶ್ರೀ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಮತದಾರರ ಜಾಗೃತಿ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಅವರು, ಮತದಾರರನ್ನು ಮತದಾನದಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬರ ಹೆಸರು ಸೇರ್ಪಡೆಯಾಗುವಂತೆ ನೋಡಿಕೊಳ್ಳಬೇಕು. ಕಡ್ಡಾಯ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶರಣಪ್ಪ ಹಾಗೂ ಕಾಲೇಜುಗಳ ಪ್ರಾಚಾರ್ಯರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಸಿಬ್ಬಂದಿ ಭಾಗವಹಿಸಿ ಮತದಾನದ ಮಹತ್ವ ಅವರ ಹಕ್ಕುಗಳ ಬಗ್ಗೆ ತಿಳಿವಳಿಕೆ ಪಡೆದರು.
ಜಾಗೃತಿ ಸಭೆ: ರಾಯಚೂರಿನ ಐಎಂಎ ಹಾಲ್ನಲ್ಲಿ ಇತ್ತೀಚೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮತದಾನದ ಹಕ್ಕಿನ ಕುರಿತು ಜಾಗೃತಿ ಸಭೆ ಏರ್ಪಡಿಸಲಾಗಿತ್ತು. ಜಿಪಂ ಸಿಇಒ ಜ್ಞಾನಪ್ರಕಾಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಡಿಎಚ್ಒ ಡಾ. ವೆಂಕಟೇಶ ನಾಯಕ, ಆರೋಗ್ಯ ಶಿಕ್ಷಣಾಧಿಕಾರಿ ಪವಾಡೆಪ್ಪ ಮತ್ತಿತರರು ಪಾಲ್ಗೊಂಡಿದ್ದರು. ಆಶಾ ಕಾರ್ಯಕರ್ತೆಯರು ಮತದಾನದ ಕಾರ್ಯದಲ್ಲಿ ಜಾಗೃತಿಗೆ ಶ್ರಮಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು.