ಬಿಜೆಪಿ ಸರ್ಕಾರದಿಂದ ಬೇಸತ್ತ ಜನತೆ: ಬಯ್ಯಾಪುರ
ಲಿಂಗಸ್ಗೂರು: ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರದಿಂದ ಬೇಸತ್ತ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಅಲೆ ಎದ್ದಿದೆ. ಇದರಿಂದ ಪಕ್ಷ ಈ ಬಾರಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಕಾರ್ಯಕರ್ತರು ಪಕ್ಷದ ಅಭ್ಯರ್ಥಿಯ ಗೆಲವಿಗೆ ಶ್ರಮಿಸಬೇಕೆಂದು ಕುಷ್ಟಗಿ ಹಂಗಾಮಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಕರೆ ನೀಡಿದರು.
ಗೆಲವಿನ ನಿರೀಕ್ಷೆ: ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾನುವಾರ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ ಜಯಂತಿ ನಿಮಿತ್ತ ಅಂಬೇಡ್ಕರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಸಭೆಗೆ ಚಾಲನೆ ನೀಡಿದರು. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸುಮಾರು 148ಕ್ಕೂ ಅಧಿಕ ಅಭ್ಯರ್ಥಿಗಳು ಗೆಲವು ಸಾಧಿಸುವ ನಿರೀಕ್ಷೆ ಇದೆ. ಇದರಲ್ಲಿ ಲಿಂಗಸ್ಗೂರು ಕ್ಷೇತ್ರದ ಪಕ್ಷದ ಅಭ್ಯರ್ಥಿಯೂ ಕೂಡ ಒಬ್ಬರಾಗಿದ್ದಾರೆಂಬ ಮನೋಭಾವದಿಂದ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಕರೆ ನೀಡಿದರು.
ಅರ್ಜಿ ಸಲ್ಲಿಕೆ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಮೇಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಇದರಿಂದ ಪಕ್ಷದ ಕಾರ್ಯಕರ್ತರು ಯಾವುದೇ ಗೊಂದಲಕ್ಕೀಡಾಗದೆ ಪಕ್ಷದ ಹೈಕಮಾಂಡ್ ನಿರ್ಧರಿಸಿದ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಮೇಟಿ, ರಾಯಚೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜರೆಡ್ಡಿ, ಮುಖಂಡರಾದ ಚಂದ್ರಶೇಖರಗೌಡ ನಾಡಗೌಡ, ಶೇಖರಗೌಡ ಮಾಲಿ ಪಾಟೀಲ, ಖಾದರಪಾಶಾ, ಬಸಣ್ಣ ಮೇಟಿ, ಬಸವರಾಜ ಗುತ್ತೇದಾರ, ಅನೀಸ್ ಪಾಶಾ, ಕುಮಾರಸ್ವಾಮಿ, ನಿಂಗಪ್ಪ ಪರಂಗಿ, ಶಿವಪ್ಪ ಮಾಚನೂರ ಸೇರಿದಂತೆ ಕಾರ್ಯಕರ್ತರು ಇದ್ದರು.