ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನಾಮಪತ್ರಗಳ ಸಲ್ಲಿಕೆ ಅಬ್ಬರ

Lingaraj Badiger
Updated On : 16 Apr 2013, 11:05 am

ರಾಯಚೂರು: ನಗರ ಸೇರಿದಂತೆ ಜಿಲ್ಲಾದ್ಯಂತ ಶುಭ ಸೋಮವಾರದ ದಿನ ಭಾರಿ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಯಾಗಿದ್ದು, ಹಾಲಿ ಶಾಸಕರು ಸೇರಿದಂತೆ 50 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬೆಳಗ್ಗೆ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತ್ರಿವಿಕ್ರಮ್ ಜೋಷಿ ಅವರು ಮುಂಗ್ರಿ ಆಂಜನೇಯ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮುಖ್ಯ ರಸ್ತೆಯಲ್ಲಿ ನೂರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು.
ಸಾಧನೆ ಮೆಚ್ಚುಗೆ: ಈ ವೇಳೆ ಅವರು ನಾಮಪತ್ರ ಸಲ್ಲಿಕೆ ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ರಾಯಚೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಗೆಲವು ನಿಶ್ಚಿತ. ಕಾಂಗ್ರೆಸ್‌ನ ಹಾಲಿ ಶಾಸಕರು ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಆರೋಪಿಸಿದರು.
ಬಿಜೆಪಿ ಪರವಾದ ಅಲೆಯಿದ್ದು, ಕ್ಷೇತ್ರದ ಮತದಾರರು ಪಕ್ಷವನ್ನು ಬೆಂಬಲಿಸಲಿದ್ದಾರೆ. ಜತೆಗೆ ಕ್ಷೇತ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಬಿಜೆಪಿ ಸರ್ಕಾರ ಕೋಟ್ಯಂತರ ರು. ಅನುದಾನ ಒದಗಿಸಿದ್ದು ಸರ್ಕಾರದ ಸಾಧನೆಯನ್ನು ಮೆಚ್ಚಿದ್ದಾರೆ. ಹೀಗಾಗಿ ಬಿಜೆಪಿ ಗೆಲವು ನಗರ ಕ್ಷೇತ್ರದಲ್ಲಿ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪೂಜಾ ಗಾಂಧಿ ನಾಮಪತ್ರ: ಬಿಎಸ್ಸಾರ್ ಕಾಂಗ್ರೆಸ್ ಅಭ್ಯರ್ಥಿ ಹಾಗೂ ನಟಿ ಪೂಜಾ ಗಾಂಧಿ ಅವರೂ ತಮ್ಮ ಅಪಾರ ಬೆಂಬಲಿಗರೊಂದಿಗೆ ನಗರದ ಪ್ರಮುಖ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು.
ಈ ವೇಳೆ ಅವರು ಸಹಾಯಕ ಆಯುಕ್ತೆ ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಯಚೂರು ನಗರ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಬಡವರಿಗೆ ನಿವೇಶನದ ಕೊರತೆ, ಹಕ್ಕುಪತ್ರ ವಿತರಣೆಯಲ್ಲಿನ ವಿಳಂಬ, ಕುಡಿಯುವ ನೀರಿನ ಅಭಾವ, ಹದಗೆಟ್ಟ ರಸ್ತೆಗಳೂ ಸೇರಿದಂತೆ ಅನೇಕ ಸಮಸ್ಯೆಗಳಿರುವುದು ಪ್ರಚಾರದ ವೇಳೆ ತಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.
ನಗರ ಕ್ಷೇತ್ರದ ಮತದಾರರು ಪ್ರಸಕ್ತ ಚುನಾವಣೆಯಲ್ಲಿ ತಮಗೆ ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಕ್ಷೇತ್ರದ ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಬಿಎಸ್ಸಾರ್ ಕಾಂಗ್ರೆಸ್ ಗೆಲವು ನಿಶ್ಚಿತ. ಪಕ್ಷದ ಪರವಾದ ಅಲೆಯಿದ್ದು, ತಮಗೆ ಚುನಾವಣೆಯಲ್ಲಿ ಅನುಕೂಲವಾಗಲಿದೆ ಎಂದು ಹೇಳಿದರು.
ಬೆಂಬಲಿಗರ ಮೆರವಣಿಗೆ: ಇದೇ ವೇಳೆ ರಾಯಚೂರು ನಗರ ಕ್ಷೇತ್ರದಲ್ಲಿ ಬಿಎಸ್ಪಿ ಅಭ್ಯರ್ಥಿ ಹಾರೇಸ್ ಸಿದ್ದಿಖಿ, ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ರಾಜಾ ರಾಯಪ್ಪ ನಾಯಕ, ಜೆಡಿಎಸ್ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಬಿಜೆಪಿ ಅಭ್ಯರ್ಥಿ ತಿಪ್ಪರಾಜು ಅವರು ತಮ್ಮ ನಾಮಪತ್ರವನ್ನು ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಸಲ್ಲಿಸಿದರು.
ದೇವದುರ್ಗದಲ್ಲಿ ಹಾಲಿ ಶಾಸಕ ಶಿವನಗೌಡ ನಾಯಕ, ಮಾಜಿ ಸಂಸದ ವೆಂಕಟೇಶ್ ನಾಯಕ, ಲಿಂಗಸ್ಗೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಮಾನಪ್ಪ ವಜ್ಜಲ್, ಸಿಂಧನೂರಿನಲ್ಲಿ ಶಾಸಕ ವೆಂಕಟರಾವ್ ನಾಡಗೌಡ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಮಾನವಿಯಲ್ಲಿ ಶಾಸಕ ಹಂಪಯ್ಯ ನಾಯಕ, ಮಾಜಿ ಶಾಸಕ ಗಂಗಾಧರ ನಾಯಕ ಮತ್ತಿತರರು ಸೋಮವಾರ ನಾಮಪತ್ರ ಸಲ್ಲಿಸಿದ ಪ್ರಮುಖರಾಗಿದ್ದಾರೆ.
ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮತ್ತು ತಹಸೀಲ್ದಾರ್ ಕಚೇರಿ ಬಳಿ ಭಾರಿ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement