ಮಕ್ಕಳ ಆರೋಗ್ಯ ಸುಧಾರಣೆಗೆ ಸರ್ಕಾರ ಬದ್ಧ
ಕನ್ನಡಪ್ರಭ ವಾರ್ತೆ ರಾಯಚೂರು ಆ.1
ರಾಜ್ಯದ ಕಾಂಗ್ರೆಸ್ ಸರ್ಕಾರ ಬಡವರ ಪರ ಎಂಬುದನ್ನು ಅನ್ನಭಾಗ್ಯ ಯೋಜನೆ ಮೂಲಕ ಸಾಬೀತುಪಡಿಸಿದೆ. ಸದ್ಯ ಕ್ಷೀರಭಾಗ್ಯ ಯೋಜನೆ ಮೂಲಕ ಶಾಲಾ ಮಕ್ಕಳ ಆರೋಗ್ಯ ಕಾಪಾಡುವ ಸುಧಾರಣೆ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಅವರು ನಗರದ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಹಾಲು ವಿತರಿಸುವ ಸರ್ಕಾರದ ನೂತನ ಕ್ಷೀರಭಾಗ್ಯ ಯೋಜನೆಗೆ ಚಾಲನೆ ನೀಡಿ, ಬಡವರ ಬದುಕಿನ ಭದ್ರತೆಗೆ ಸರ್ಕಾರ ಕಳೆದ ತಿಂಗಳು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಸಮರ್ಪಕ ಅನುಷ್ಠಾನಗೊಳಿಸಿದೆ.
ವಿನೂತನ ಕಾರ್ಯಕ್ರಮ: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಕೆಎಂಎಫ್ ಸಹಯೋಗದಲ್ಲಿ ಹಾಲು ವಿತರಿಸುವ ವಿನೂತನ ಕಾರ್ಯಕ್ರಮ ಜಾರಿಗೆ ತರುವ ಮೂಲಕ ಶಾಲಾ ಮಕ್ಕಳ ಆರೋಗ್ಯ ಸುಧಾರಣೆಗೂ ಸರ್ಕಾರ ಮುಂದಾಗಿದೆ. ಅದರಲ್ಲೂ ಹೈ.ಕ. ಭಾಗದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸುಧಾರಣೆಗೆ ಕ್ಷೀರಭಾಗ್ಯ ಯೋಜನೆಯಿಂದ ನೆರವಾಗಲಿದೆ ಎಂದರು.
ರಾಜ್ಯದಲ್ಲಿ 51 ಸಾವಿರ ಶಾಲೆಗಳಿದ್ದು, 65 ಲಕ್ಷ ಶಾಲಾ ಮಕ್ಕಳಿಗೆ ಯೋಜನೆಯ ಲಾಭ ದೊರೆಯಲಿದೆ. ಶಾಲಾ ಮಕ್ಕಳಿಗೆ ಕೆನೆ ಸಹಿತ ಹಾಲಿನ ಪುಡಿಯಿಂದ ತಯಾರಿಸಿದ ಹಾಲು ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕೆನೆ ರಹಿತ ಹಾಲಿನ ಪುಡಿಯಿಂದ ತಯಾರಿಸಿದ ಹಾಲು ವಿತರಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಈ ಯೋಜನೆಗೆ ರು. 429.25 ಕೋಟಿ ವೆಚ್ಚ ಮಾಡುತ್ತಿದ್ದು, ಪ್ರತಿ ಶಾಲಾ ಮಗುವಿಗೆ 4.64 ಹಾಗೂ ಅಂಗನವಾಡಿ ಕೇಂದ್ರದ ಮಗುವಿಗೆ 2.85 ವೆಚ್ಚ ಮಾಡುತ್ತಿದೆ. ಹಾಲಿನ ನಿರಂತರ ಸೇವನೆಯಿಂದ ಮಕ್ಕಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದಾಗಿದೆ ಎಂದರು.
ಆರೋಗ್ಯವಂತ ಸಮಾಜ: ಹಾಲಿನ ನಿರಂತರ ಸೇವನೆಯಿಂದ ಮಕ್ಕಳ ಬೌದ್ಧಿಕ ಮಟ್ಟದಲ್ಲಿ ಸುಧಾರಣೆ ಕಂಡುಬಂದು ಶೈಕ್ಷಣಿಕ ಸಾಧನೆಗೆ ನೆರವಾಗಲಿದೆ. ಆ ಮೂಲಕ ಉತ್ತಮ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಆಡಳಿತದಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆಯನ್ನು ಕಾಂಗ್ರೆಸ್ ಸರ್ಕಾರ ನೀಡಲು ಬದ್ಧವಾಗಿದೆ ಎಂದು ಹೇಳಿದರು.
ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಬಡವರ ಪರವಾದ ನಿಲುವು ಹೊಂದುವ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದಿಸಿ ಪರಿಹಾರ ಕಂಡುಕೊಳ್ಳುವ ಕಾರ್ಯ ಮಾಡಬೇಕು. ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೆ ಬೆಂಬಲಿಸುವ ಮಾತೇಯಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿ, ಹೈ.ಕ.ಭಾಗದ ಸಮಗ್ರ ಅಭಿವೃದ್ಧಿಗೆ 371ನೇ ಕಲಂ ಅಡಿ ರೂಪಿಸಿದ ನಿಯಮಗಳು ಈ ಭಾಗದ ಜನರ ಸರ್ವತೋಮುಖ ಪ್ರಗತಿಗೆ ದಾರಿಯಾಗಲಿವೆ. ಮುಂದಿನ ಪೀಳಿಗೆಗೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲಾತಿ ಕಲ್ಪಿಸುವ ಮೂಲಕ ಅಭಿವೃದ್ಧಿಗೆ ನಾಂದಿಯಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯದ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಪಾಟೀಲ್ ಅಭಿನಂದಿಸಿದರು.
ಹಾಲು ವಿತರಣೆ: ಸಮಾರಂಭದಲ್ಲಿ ಸಾಂಕೇತಿಕವಾಗಿ ಶಾಲಾ ಮಕ್ಕಳಿಗೆ ಸಚಿವರು ಕ್ಷೀರಭಾಗ್ಯ ಯೋಜನೆ ಅಡಿ ಹಾಲು ವಿತರಿಸಿದರು.
ವೇದಿಕೆಯಲ್ಲಿ ಶಾಸಕ ತಿಪ್ಪರಾಜು ಹವಾಲ್ದಾರ್, ಜಿಪಂ ಅಧ್ಯಕ್ಷೆ ಲಲಿತಮ್ಮ, ಉಪಾಧ್ಯಕ್ಷ ಶರಣಪ್ಪ, ತಾಪಂ ಅಧ್ಯಕ್ಷ ಚಂದ್ರಶೇಖರ್, ಕೆಎಂಎಫ್ ನಿರ್ದೇಶಕ ಬಿ. ಸತ್ಯನಾರಾಯಣ, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಜಿಪಂ ಸಿಇಒ ಡಾ. ಮುದ್ದುಮೋಹನ್, ಎಸ್ಪಿ ಎಸ್.ಬಿ. ಬಿಸನಳ್ಳಿ ಮತ್ತಿತರರಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.