ವಿದ್ಯಾರ್ಥಿ, ಶಿಕ್ಷಕರಿಗೆ ಕಾರ್ಯಾಗಾರ
ರಾಯಚೂರು: ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ರಾಯಚೂರು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆ.2013ರಿಂದ ಜ.2014ರವರೆಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಹಿಂದುಳಿದ ತಾಲೂಕುಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಸೇರಿ ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ.
ಈ ಕುರಿತು ಜಿಲ್ಲಾ ವಿಜ್ಞಾನ ಕೇಂದ್ರದ ಪ್ರಕಟಣೆ ನೀಡಿ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಉಪನ್ಯಾಸಗಳು, ವಿಜ್ಞಾನ ಬರಹಗಾರರಿಗೆ ಕಾರ್ಯಾಗಾರ, ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ದಿನಾಚರಣೆಗಳು, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ವಿಜ್ಞಾನ ವಸ್ತು ಪ್ರದರ್ಶನ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳು, ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧ ಸಂಶೋಧನಾ ಕೇಂದ್ರಗಳಿಂದ ಹಾಗೂ ವಿಶ್ವವಿದ್ಯಾಲಯಗಳಿಂದ ಖ್ಯಾತ ವಿಜ್ಞಾನಿಗಳು ಮತ್ತು ಉದ್ಯಮಿಗಳು ಭಾಗವಹಿಸಲಿದ್ದಾರೆ.
ಸ್ಪರ್ಧೆಗಳಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳಿಗೆ ಒಟ್ಟು ಸುಮಾರು 56 ಸಾವಿರ ಬಹುಮಾನ ನೀಡಲಾಗುತ್ತದೆ. ಪ್ರಮಾಣ ಪತ್ರ ವಿತರಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಊಟ-ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರವಾಸ ಭತ್ಯೆ, ದಿನ ಭತ್ಯೆ ಮತ್ತು ವಿಜ್ಞಾನಿಗಳು ಕೊಟ್ಟ ಟಿಪ್ಪಣಿ ನೀಡಲಾಗುವುದು ಎಂದು ತಿಳಿಸಿದೆ.