ಸುದ್ದಿ ಸಂಕ್ಷೇಪ
ಮೂಲ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ಸಿಂಧನೂರು: ತಾಲೂಕಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಶಿರಸ್ತೇದಾರ ರಾಮಣ್ಣ ಹೊಸಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಗರದ ಮುಖ್ಯರಸ್ತೆಗಳನ್ನು ಅಭಿವೃದ್ಧಿಪಡಿಸಿ ಡಾಂಬರೀಕರಣ ಮಾಡಬೇಕು. ಎಲ್ಲ ಮುಖ್ಯ ಬಡಾವಣೆಯಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಬೇಕು. ನೀರು ಸುಗಮವಾಗಿ ಹೋಗುವಂತೆ ಚರಂಡಿಗಳನ್ನು ನಿರ್ಮಾಣ ಮಾಡಬೇಕು. ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಬೇಕು. ಸಾರ್ವಜನಿಕರ ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ನಗರದ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಧ್ಯಕ್ಷ ಸೈಯದ್ ರಸೂಲ್ ಮುಲ್ಲಾ, ಕಾರ್ಯದರ್ಶಿ ಮೆಹಬೂಬ್ ಖಾನ್, ಮಸೂದ್, ಮೌಲಹುಸೇನ, ವೆಂಕನಗೌಡ ಗದ್ರಟಗಿ, ಯಾಖುಬ್ ಅಲಿ ಸೇರಿದಂತೆ ಅನೇಕರು ಇದ್ದರು.
'ಮಕ್ಕಳ ಹಕ್ಕುಗಳ ಜಾಗೃತಿ ಮೂಡಿಸಿ'
ರಾಯಚೂರು: ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳನ್ನು ಪರಿಣಾಮಕಾರಿಯಾಗಿ ತಿಳಿಸಿಕೊಡುವ ಕಾರ್ಯವಾಗಬೇಕಿದೆ ಎಂದು ಪ್ರಭಾರಿ ಡಿಡಿಪಿಐ ಚಂದ್ರಶೇಖರ್ ಹೇಳಿದರು. ನಗರದಲ್ಲಿ ಶನಿವಾರ ಯುನಿಸೆಫ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಕ್ಲಬ್ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರ ಮಹತ್ವದ ಪಾತ್ರ ವಹಿಸಲಿದೆ ಎಂದರು. ಬಿಇಒ ಮಲ್ಲಿಕಾರ್ಜುನ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರೂ ನೀಡಿರುವ ಪ್ರಾಮುಖ್ಯತೆ ಮತ್ತು ಅನುಷ್ಠಾನಕ್ಕೆ ತೋರಿರುವ ಆಸಕ್ತಿ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು. ಯುನಿಸೆಫ್ ಅಧಿಕಾರಿ ರಾಘವೇಂದ್ರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವೀಣಾ ಪಲ್ಲಕ್ಕಿ, ಕಿಶನರಾವ್ ಸೇರಿ ಅನೇಕರಿದ್ದರು.
ಆರ್ಯ ಈಡಿಗ
ಸಂಘ ಹರ್ಷ
ಸುರಪುರ: ಆರ್ಯ ಈಡಿಗ ಸಮಾಜದ ಬ್ರಹ್ಮರ್ಷಿ ನಾರಾಯಣ ಗುರುಗಳ ಅಧ್ಯಯನ ಪೀಠವನ್ನು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿ, 2 ಕೋಟಿ ಒದಗಿಸುವ ಭರವಸೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ರಮವನ್ನು ತಾಲೂಕು ಆರ್ಯ ಈಡಿಗ ಸಮಜ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದೆ.