ಸಭೆಗೆ ಅಧಿಕಾರಿಗಳ ಗೈರು: ನೋಟಿಸ್ ಜಾರಿಗೆ ಸೂಚನೆ
ರಾಯಚೂರು: ತಾಲೂಕು ಪಂಚಾಯಿತಿ ಸಭೆಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಪೂರ್ವಾನುಮತಿ ಪಡೆಯದೇ ಗೈರು ಹಾಜರಾಗುತ್ತಿದ್ದು, ಅಂಥ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡುವಂತೆ ಶಾಸಕರಾದ ಡಾ.ಶಿವರಾಜ್ ಪಾಟೀಲ್ ಮತ್ತು ತಿಪ್ಪರಾಜು ಹವಾಲ್ದಾರ್ ಸೂಚಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಇಬ್ಬರೂ ಶಾಸಕರು, ಪ್ರಗತಿ ಪರಿಶೀಲನೆ ಸಭೆಗಳಿಗೆ ಅಧಿಕಾರಿಗಳು ಗೈರು ಹಾಜರಾದರೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವುದಾದರೂ ಹೇಗೆ? ಎಂದು ಪ್ರಶ್ನಿಸಿ, ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಎಚ್ಚರಿಕೆ ನೋಟೀಸ್ ನೀಡಲು ಆದೇಶಿಸಿದರು.
ಅನುದಾನ ಬಳಕೆ ವಿಫಲ: ಅಧಿಕಾರಿಗಳ ಕಾರ್ಯವೈಖರಿಯಿಂದಾಗಿ ಸಮಸ್ಯೆಗಳು ನಿವಾರಣೆಯಾಗುತ್ತಿಲ್ಲ. ಜಿಲ್ಲೆಯು ಅಭಿವೃದ್ಧಿಯಿಂದ ದೂರವುಳಿಯಲು ಅಧಿಕಾರಿಗಳೇ ಕಾರಣ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸಾವಿರಾರು ಕೋಟಿ ರು. ಅನುದಾನ ದೊರೆಯುತ್ತಿದೆ. ಆದರೆ ಅದರ ಬಳಕೆಯಲ್ಲಿ ನಾವೆಲ್ಲ ವಿಫಲರಾಗುತ್ತಿದ್ದೇವೆಂದು ತರಾಟೆಗೆ ತೆಗೆದುಕೊಂಡರು.
ತಾಲೂಕಿನಲ್ಲಿ ಎರಡು ನದಿಗಳಿದ್ದರೂ, ಅನೇಕ ಗ್ರಾಮಗಳಿಗೆ ಸಮರ್ಪಕ ಕುಡಿವ ನೀರೊದಗಿಸುವ ಕಾರ್ಯ ಆಗಿಲ್ಲ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ. ಸಮಸ್ಯೆಯ ತೀವ್ರತೆ ಅರಿಯುವಲ್ಲಿ ಅಧಿಕಾರಿಗಳು ನಿರಾಸಕ್ತಿ ತೋರುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.
ಎಚ್ಚರಿಕೆ: ತಾಪಂ ಸಭೆಗೆ ಹಾಜರಾಗುವ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಆಗಮಿಸಬೇಕು. ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ ಶಾಸಕರು, ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧವಿಲ್ಲ. ಎಲ್ಲರೂ ಒಗ್ಗೂಡಿ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದರು. ನಂತರ ವಿವಿಧ ಇಲಾಖೆಗಳ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ತಾಪಂ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷೆ ಜಯಮ್ಮ, ಇಒ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.