ರಾಜೀವ್, ಅರಸು ಕಾರ್ಯ ಶ್ಲಾಘನೀಯ
ಕನ್ನಡಪ್ರಭ ವಾರ್ತೆ ಲಿಂಗಸ್ಗೂರು ಆ. 20
ದೇಶದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಡಿ. ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್ ತಿಳಿಸಿದರು.
ಅಭಿವೃದ್ಧಿ ಕಾರ್ಯ: ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ. ದೇವರಾಜ ಅರಸು ಅವರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿ, ದಿ. ರಾಜೀವ್ ಗಾಂಧಿ ಅವರು ದೇಶದ ಪ್ರಧಾನಿಯಾಗಿದ್ದ ಸಮಯದಲ್ಲಿ ತಂತ್ರಜ್ಞಾನ ಅಭಿವೃದ್ಧಿ ಪಡಿಸುವ ಜೊತೆಗೆ ಎಲ್ಲ ವರ್ಗದ ಜನಾಂಗದ ಅಭಿವೃದ್ಧಿಗೆ ಶ್ರಮಿಸಿದ್ದರು. ಅದರಂತೆ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರು ಉಳುವವನೇ ಒಡೆಯ ಎಂಬ ಕಾರ್ಯಕ್ರಮ ರೂಪಿಸುವ ಮೂಲಕ ಲಕ್ಷಾಂತರ ರೈತರ ಸಬಲತೆಗೆ ಕಾರಣರಾಗಿದ್ದಾರೆ. ದೇಶದ ಮತ್ತು ರಾಜ್ಯದ ಹಿಂದುಳಿದ ವರ್ಗಗಳ ಜನಾಂಗಕ್ಕೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಇರ್ವರು ನಾಯಕರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಶ್ಲಾಘನೀಯ: ತಾಪಂ ಮಾಜಿ ಉಪಾಧ್ಯಕ್ಷ ಡಿ.ಜಿ. ಗುರಿಕಾರ ಮಾತನಾಡಿ, ದೇಶದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಗ್ರಾಮ ಪಂಚಾಯ್ತಿಗಳ ಆಡಳಿತ ವ್ಯವಸ್ಥೆ ಸುಧಾರಿಸುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದರು. ಅದರಂತೆ ಹಿಂದುಳಿದ ವರ್ಗಗಳ ನೇತಾರರೆಂದು ಹೆಸರಾದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರು ದೀನ, ದಲಿತರನ್ನು ಮೇಲೆತ್ತುವ ಕಾರ್ಯ ಶ್ಲಾಘನೀಯವಾಗಿದೆ. ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶ ಪಾಲನೆ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯರಾದ ಬಸನಗೌಡ ಕೊಡ್ಲಿ, ಗುಂಡಪ್ಪ ಸಾಹುಕಾರ, ಮುಖಂಡರಾದ ಸೋಮಶೇಖರ ಐದನಾಳ, ಶಿವನಗೌಡ ಪಾಟೀಲ್, ಚೆನ್ನಾರೆಡ್ಡಿ ಬಿರಾದಾರ, ಬಾಬಾಖಾಜಿ, ನಾಗರಾಜ ತಿಪ್ಪಣ್ಣ, ವಿಶ್ವನಾಥ ಗುತ್ತೇದಾರ, ಬೀರಪ್ಪ ಪೂಜಾರ, ಹಾಜಿಬಾಬು, ಪರಶುರಾಮ ನಗನೂರ ಮತ್ತಿತರರು ಇದ್ದರು.