ಹಾಸ್ಟೆಲ್ನಲ್ಲಿ ಮೂಲ ಸೌಲಭ್ಯಕ್ಕೆ ಆಗ್ರಹ
ರಾಯಚೂರು: ಮೂಲ ಸೌಲಭ್ಯಗಳಿಗೆ ಆಗ್ರಹಿಸಿ ನಗರದಲ್ಲಿ ಶನಿವಾರ ಆಶಾಪುರ ರಸ್ತೆಯ ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಡಿಸಿ ಕಚೇರಿ ಎದುರು ಪ್ರತಿಭಟಿಸಿದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಬಿಸಿಎಂ ವಸತಿ ನಿಲಯಗಳಲ್ಲಿ ಸೌಲಭ್ಯವಿಲ್ಲ.ಅಧಿಕಾರಿಗಳಿಗೆ ದೂರಿತ್ತರೂ ಪ್ರಯೋಜನವಾಗಿಲ್ಲ. ವಸತಿ ನಿಲಯದಲ್ಲಿ ಶುದ್ಧ ಕುಡಿವ ನೀರು, ಶೌಚಾಲಯದ ವ್ಯವಸ್ಥೆ, ಚರಂಡಿ ಸೌಲಭ್ಯ, ಶೈಕ್ಷಣಿಕ ಸಾಮಗ್ರಿ ಒದಗಿಸುವ ಕಾರ್ಯ ನಡೆದಿಲ್ಲ. ಇದರಿಂದಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ. ವಿದ್ಯುತ್ ಕೈಕೊಡುವುದರಿಂದ ವ್ಯಾಸಂಗಕ್ಕೆ ತೊಂದರೆಯಾಗಿದೆ ಎಂದು ದೂರಿದರು.
ಕಾರಣ ಕೂಡಲೇ ಜಿಲ್ಲಾಧಿಕಾರಿಗಳು ವಸತಿ ನಿಲಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂದರ್ಭ ಬಿಸಿಎಂ ವಿದ್ಯಾರ್ಥಿಗಳ ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.