ಅಧಿಕಾರಿಗಳ ಸಹಕಾರದಿಂದ ಜಿಲ್ಲೆಯ ಅಭಿವೃದ್ಧಿ: ಜಿಲ್ಲಾಧಿಕಾರಿ
ಲಿಂಗಸ್ಗೂರು: ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡಿದಾಗ ಸರ್ಕಾರದ ಹಲವಾರು ಯೋಜನೆಗಳ ಅನುಷ್ಠಾನ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಸೇರಿದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಇತ್ತೀಚೆಗೆ ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಹೇಳಿದರು.
ಸ್ಥಳೀಯ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸರಳ ಸಮಾರಂಭದಲ್ಲಿ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಗೆ ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸಹಕಾರದಿಂದ ಮಾತ್ರ ಅಭಿವೃದ್ಧಿ: ಯಾವುದೇ ಒಂದು ಪಂದ್ಯಾವಳಿಯಲ್ಲಿ ಕೇವಲ ತಂಡದ ನಾಯಕನಿಂದ ಗೆಲವು ಸಾಧ್ಯವಿಲ್ಲ. ತಂಡದಲ್ಲಿನ ಎಲ್ಲ ಸದಸ್ಯರು ಸಹಕಾರ ನೀಡಿದಾಗ ಗೆಲವು ಸಾಧಿಸಲು ಸಾಧ್ಯವಾಗುತ್ತದೆ. ಅದರಂತೆ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು, ನೌಕರರು, ಸಿಬ್ಬಂದಿ ಜಿಲ್ಲಾಧಿಕಾರಿಗೆ ಸಹಕಾರ ನೀಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನುಡಿದರು.
ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಗೊಳಿಸಿ ಉನ್ನತ ಸ್ಥಾನದಲ್ಲಿ ತರಬೇಕೆನ್ನುವುದು ತಮ್ಮ ಬಯಕೆಯಾಗಿತ್ತು. ಆದರೆ, ಒಂದು ವರ್ಷ ಆಡಳಿತ ನಡೆಸಿರುವುದು ತಮಗೆ ತೃಪ್ತಿ ತಂದಿದ್ದು, ಅಧಿಕಾರಿಗಳ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆಯಾಗಿದೆ. ಇದಕ್ಕೆ ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಿದ್ದಾರೆ.
ಲಿಂಗಸ್ಗೂರು ಪಟ್ಟಣದ ಕೆರೆ ಅಭಿವೃದ್ಧಿ ಹಾಗೂ ಕೆರೆಯ ಪಕ್ಕದಲ್ಲಿ ಬಾಲಭವನ ನಿರ್ಮಾಣ, ಮುದಗಲ್ ಕೋಟೆ ಅಭಿವೃದ್ಧಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಕುರಿತು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಸರ್ಕಾರದಿಂದ ಅನುಮತಿ ದೊರೆಯುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಭಿವೃದ್ಧಿಗೆ ಕಾಲಾವಕಾಶ ಅಗತ್ಯ: ಸಹಾಯಕ ಆಯುಕ್ತ ಟಿ.ಯೋಗೇಶ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ ಯಾವುದೇ ಒಂದು ಜಿಲ್ಲೆಯ ಕುರಿತು ಸಮಗ್ರ ಮಾಹಿತಿ ಪಡೆದು ಕೆಲಸ ಮಾಡಲು ಕಾಲಾವಕಾಶ ಅವಶ್ಯವಾಗಿರುತ್ತದೆ. ಅದರಂತೆ ಕಂದಾಯ ಇಲಾಖೆ ವ್ಯಾಪ್ತಿಯ ಅಧ್ಯಯನ ನಡೆಸುವುದು ಹೆಚ್ಚಿನ ಅವಧಿ ಬೇಕಾಗುತ್ತದೆ. ಜಿಲ್ಲಾಧಿಕಾರಿಗಳು ಜಿಲ್ಲೆಯ ಕುರಿತು ಕೇವಲ ಒಂದು ವರ್ಷ ಅವಧಿಯಲ್ಲಿ ಆಳವಾಗಿ ಅಧ್ಯಯನ ನಡೆಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ.
ಅಲ್ಲದೆ ಬರಗಾಲ, ನೆರೆ, ನೀರಾವರಿ, ರಸಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ವಿವಿಧ ಸಮಸ್ಯೆಗಳು ಎದುರಾದ ಸಮಯದಲ್ಲಿ ಸಮರ್ಪಕವಾಗಿ ಸ್ಪಂದನೆ ನೀಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ತಹಸೀಲ್ದಾರ್ ರಾಮಣ್ಣ, ಸಹಾಯಕ ಕೃಷಿ ನಿರ್ದೇಶಕಿ ಸರಸ್ವತಿ, ಜೆಸ್ಕಾಂ ಇಲಾಖೆ ಅಧಿಕಾರಿ ರಿಯಾಜ ಅಹ್ಮದ್, ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ, ಆಹಾರ, ಸರ್ವೆ, ಸಿಡಿಪಿಒ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.