ಜಿಲ್ಲೆಯಲ್ಲಿ ವೈದ್ಯಕೀಯ ಸೇವೆ ಸ್ಥಗಿತ
ರಾಯಚೂರು: ಜಿಲ್ಲೆಯಲ್ಲಿ ಫೆ.8 ರಿಂದ ಆರೋಗ್ಯ ಇಲಾಖೆಯ ವೈದ್ಯರು ಮತ್ತಿತರೆ ಸಿಬ್ಬಂದಿ ಮುಷ್ಕರದಲ್ಲಿ ತೊಡಗಿರುವುದರಿಂದ ಆರೋಗ್ಯ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ರೋಗಿಗಳು ಖಾಸಗಿ ಆಸ್ಪತ್ರೆಗೆ ಮೊರೆ ಹೋಗುವಂತಾಗಿದೆ. ಫೆ.6 ರಿಂದ ಜಿಲ್ಲಾದ್ಯಂತ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿ ಮುಷ್ಕರದಲ್ಲಿ ತೊಡಗಿದ್ದು, ಫೆ.8ರಿಂದ ತುರ್ತು ಸೇವೆ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಹೋರಾಟದಲ್ಲಿ ಭಾಗಿಯಾಗಿದ್ದರಿಂದ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಗಳು ಸ್ಥಗಿತಗೊಂಡಿವೆ.ವಾಂತಿಬೇಧಿ: ತಾಲೂಕಿನ ಚಂದ್ರಬಂಡಾ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 25ಕ್ಕೂ ಹೆಚ್ಚಿನ ಜನರು ವಾಂತಿಬೇಧಿಯಿಂದ ಅಸ್ವಸ್ಥಗೊಂಡಿದ್ದು, ಅವರನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.