ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

24ರಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜತೆ ವಿಶೇಷ ಸಂವಾದ

Mainashree
Updated On : 21 Feb 2013, 10:58 am

ರಾಯಚೂರು: ಧಾರವಾಡದ ವಿಜಯಿ ಕರ್ನಾಟಕ ಪದವಿ ಪೂರ್ವ ವಿಜ್ಞಾನ ಕಾಲೇಜು ಹಾಗೂ ಎಸ್ಕೆಇ ಸಮೂಹ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ ಬಗೆ ಹೇಗೆ ಎಂಬ ವಿಷಯದ ಕುರಿತು ಫೆ. 24ರಂದು ವಿಶೇಷ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಕೆಇ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಾಬುರಾವ್ ಶೇಗುಣಸಿ, ಅಂದು ನಗರದ ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ಬೆ.9ಕ್ಕೆ ಸಂವಾದ ಕಾರ್ಯಕ್ರಮವನ್ನು ಕೃಷಿ ವಿವಿ ಕುಲಪತಿ ಡಾ. ಬಿ.ವಿ. ಪಾಟೀಲ್ ಉದ್ಘಾಟಿಸಲಿದ್ದಾರೆಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ, ಪಾಲಕರಿಗೆ ಮತ್ತು ಶಿಕ್ಷಕ ಸಮುದಾಯದ ಜತೆ ಸಂವಾದ ನಡೆಸಲು ಧಾರವಾಡದ ಖ್ಯಾತ ಮನೋವೈದ್ಯ ಡಾ. ಆನಂದ ಪಾಂಡುರಂಗಿ, ಐಐಸಿಇ ಧಾರವಾಡದ ನಿರ್ದೇಶಕ ವಿಶ್ವನಾಥ ನಾಗಠಾಣ, ನಗರದ ವೈದ್ಯ ಡಾ. ಶಿವರಾಜ್ ಪಾಟೀಲ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.
ಪರೀಕ್ಷಾ ಭಯ ಹೋಗಲಾಡಿಸುವ ಉದ್ದೇಶ: ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನ, ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ತೀರಾ ಹಿಂದುಳಿದಿದ್ದಾರೆ. ಅದೇ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಮನೆ ಮಾಡಿದ ಭಯ ಹೋಗಲಾಡಿಸುವ ಉದ್ದೇಶದಿಂದಲೇ ವಿಶೇಷ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ನಗರ ಸೇರಿದಂತೆ ಸುತ್ತಲಿನ ಗ್ರಾಮಗಳ 250 ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅದೇ ರೀತಿ ಎಸ್ಸೆಸ್ಸೆಲ್ಸಿ ನಂತರ ಮುಂದೇನು ಎಂದು ವಿದ್ಯಾರ್ಥಿಗಳಿಗೆ ಕಾಡುವ ಪ್ರಶ್ನೆಯ ಬಗ್ಗೆಯೂ ಪರಿಹಾರ ಸೂಚಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.
ಉತ್ತರಿಸುವ ರೀತಿಯಲ್ಲಿ ದೋಷ: ಸಂಸ್ಥೆಯ ನಿರ್ದೇಶಕ ಮಲ್ಲಿಕಾರ್ಜುನ ಹಳ್ಳೂರು ಮಾತನಾಡಿ, ಈಚೆಗೆ ಸಂಸ್ಥೆಯಿಂದ ನಗರದ ಸರ್ಕಾರಿ ಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾನ್ವೇಷಣೆ ಪರೀಕ್ಷೆ ಆಯೋಜಿಸಲಾಗಿತ್ತು. ಆ ಪರೀಕ್ಷೆಯಲ್ಲಿ ಆಯ್ದ 21 ಶಾಲೆಗಳ 1,237 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅವರಲ್ಲಿ ಅನೇಕರು ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆಯಲ್ಲಿ ಉತ್ತರಿಸುವ ರೀತಿಯಲ್ಲಿ ದೋಷಗಳು ಕಂಡುಬಂದಿವೆ. ಅದರಿಂದಲೇ ವಿದ್ಯಾರ್ಥಿಗಳು ಸಾಧನೆಯಲ್ಲಿ ಹಿಂದೆ ಬಿದ್ದಿರುವುದು ಪತ್ತೆಯಾಗಿದೆ ಎಂದು ತಿಳಿಸಿದರು.
ಖಾಸಗಿ ಶಾಲೆಗಳ ಪ್ರಗತಿಗೇನು ಕಾರಣ?: ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಹೋಲಿಕೆ ಮಾಡಿದರೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ತೀರಾ ಕೆಳಮಟ್ಟದಲ್ಲಿದೆ. ಖಾಸಗಿ ಶಾಲೆಗಳ ಶಿಕ್ಷಕರನ್ನು ಸರ್ಕಾರ ಯಾವುದೇ ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಪೂರ್ಣ ಪ್ರಮಾಣದಲ್ಲಿ ಮಕ್ಕಳ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ. ಅದರಿಂದ ಖಾಸಗಿ ಶಾಲೆಗಳ ಫಲಿತಾಂಶ ಪ್ರಗತಿಯತ್ತಲೇ ಸಾಗುತ್ತಿದೆ ಎಂದು ಹೇಳಿದರು.
ಸಂಸ್ಥೆಯಿಂದ ನಡೆಸಿದ ಪ್ರತಿಭಾನ್ವೇಷಣೆ ಪರೀಕ್ಷೆಯ ವಿಜೇತರಿಗೆ ಫೆ. 24ರಂದು ನಡೆಯಲಿರುವ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುತ್ತದೆ. ಪ್ರಥಮ ಬಹುಮಾನ 15 ಸಾವಿರ, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನವಾಗಿ 5 ಸಾವಿರ ವಿತರಿಸಲಾಗುವುದು ಎಂದರು.
ಈ ವೇಳೆ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ನರಸಿಂಹಮೂರ್ತಿ ಆನೆಗೊಂದಿ, ಶ್ರವಣ ಕುಮಾರ್ ಹಿರೇಮಠ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement