ಅಗತ್ಯ ಪೊಲೀಸ್ ಸಿಬ್ಬಂದಿ ನೇಮಕಕ್ಕೆ ಆಗ್ರಹ
ರಾಯಚೂರು: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿ ಕೊರತೆಯಿಂದಾಗಿ ಸದ್ಯ ಕಾರ್ಯನಿರ್ವಹಿಸುತ್ತಿರುವವರ ಮೇಲೆ ಕೆಲಸದ ಒತ್ತಡ ಹೆಚ್ಚಿದ್ದು, ಕೌಟುಂಬಿಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಅಗತ್ಯ ಪೊಲೀಸರ ನೇಮಕಾತಿಗೆ ಸರ್ಕಾರ ಮುಂದಾಗಬೇಕೆಂದು ಮಾದಿಗ ದಂಡೋರಾ ಮಾದಿಗ ರಿಸರ್ವೇಶನ್ ಹೋರಾಟ ಸಮಿತಿ ಆಗ್ರಹಿಸಿದೆ.
ಈ ಕುರಿತು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಸಿಂಗನೋಡಿ ಮಾದಿಗ ಈಚೆಗೆ ರಾಜ್ಯದ ಗೃಹ ಸಚಿವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿ, ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ರಜೆ ನೀಡದ್ದರಿಂದ ಪಿಎಸ್ಸೈ ಅವರನ್ನು ಹತ್ಯೆ ಮಾಡಲಾಗಿದೆ. ಈ ಘಟನೆಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ರಜೆ ನೀಡದಂಥ ಪರಿಸ್ಥಿತಿಯಿದೆ. ಸಿಬ್ಬಂದಿ ಕೊರತೆ ನೆಪದಲ್ಲಿ ಲಭ್ಯವಿರುವ ಸಿಬ್ಬಂದಿಯಿಂದಲೇ ಕೆಲಸ ತೆಗೆಯುತ್ತಿರುವುದು ಸಮಸ್ಯೆಗೆ ದಾರಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಮುಂಬರುವ ಬಜೆಟ್‌ನಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.