ಅನ್ನಭಾಗ್ಯದಲ್ಲಿ ಅಕ್ರಮ ಸುಳಿಯದಿರಲಿ; ಎಚ್ಚರಿಕೆ
ಕನ್ನಡಪ್ರಭ ವಾರ್ತೆ, ರಾಯಚೂರು, ಜು.10
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು, ನ್ಯಾಯಬೆಲೆ ಅಂಗಡಿಗಳವರು ಮುಂದಾಗಬೇಕಿದೆ. ನ್ಯಾಯಬೆಲೆ ಅಂಗಡಿಗಳವರು ಈ ನಿಟ್ಟಿನಲ್ಲಿ ಅಕ್ರಮ ಎಸಗುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಎಚ್ಚರಿಸಿದರು.
ಅವರು ನಗರದ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಆಹಾರ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಅನ್ನಭಾಗ್ಯ ಯೋಜನೆಯ ಉದ್ಘಾಟನೆ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿ, ಕಳೆದ ಸರ್ಕಾರಗಳು ಕಾಂಗ್ರೆಸ್ ಈ ಹಿಂದೆ ಜಾರಿಗೆ ತಂದಿದ್ದ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಮಾರ್ಪಾಟು ಮಾಡಿ ಕಡಿಮೆ ಪ್ರಮಾಣದಲ್ಲಿ ಆಹಾರ ಧಾನ್ಯ ನೀಡುತ್ತಿದ್ದವು. ಅದರಿಂದ ಬಡವರಿಗೆ ತೊಂದರೆಯಾಗಿತ್ತು. ಆ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಅನ್ನಭಾಗ್ಯ ಯೋಜನೆ ಜಾರಿಗೆ ಮುಂದಾಯಿತು ಎಂದು ಹೇಳಿದರು.
ಅಕ್ರಮಗಳ ಬಗ್ಗೆ ಎಚ್ಚರಿಕೆ ಇರಲಿ: ಅನ್ನಭಾಗ್ಯ ಯೋಜನೆಯಿಂದ ರಾಜ್ಯದ 11.17ಲಕ್ಷ ಅಂತ್ಯೋದಯ ಹಾಗೂ 86.88 ಲಕ್ಷ ಬಿಪಿಎಲ್ ಕುಟುಂಬಗಳಿಗೆ ಲಾಭವಾಗಲಿದೆ. ಬಡವರಿಗೆಂದೇ ರೂಪಿಸಿದ ಯೋಜನೆಯಲ್ಲಿ ಅಕ್ರಮಗಳು ನಡೆಯದಂತೆ ಎಲ್ಲರೂ ಎಚ್ಚರಿಕೆ ವಹಿಸಬೇಕಿದೆ. ತಪ್ಪಿದಲ್ಲಿ ಯೋಜನೆಯಲ್ಲಿ ಅಕ್ರಮಗಳು ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದರು.
ಅಧಿಕಾರಿಗಳು ನಿರಂತರ ನಿಗಾ ಇರಿಸಿ ಯೋಜನೆಯ ಯಶಸ್ಸಿಗೆ ದುಡಿಯಬೇಕು. ಕಾಳಸಂತೆಯಲ್ಲಿ ಅಕ್ಕಿ ಮಾರಾಟವಾಗದಂತೆ ತಡೆಯಬೇಕು. ನ್ಯಾಯಬೆಲೆ ಅಂಗಡಿಗಳವರು ದುಷ್ಕರ್ಮಿಗಳೊಂದಿಗೆ ಕೈಜೋಡಿಸಿ ಅಕ್ರಮದಲ್ಲಿ ತೊಡಗಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಗತ್ಯ ದಾಸ್ತಾನು: ರಾಯಚೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯ ಸಮರ್ಪಕ ಜಾರಿಗೆ ಸರ್ಕಾರದಿಂದ ರು. 5 ಕೋಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಗೆ ಪ್ರತಿ ತಿಂಗಳು 86185 ಕ್ವಿಂಟಲ್ ಅಕ್ಕಿ, 3274 ಕ್ವಿಂಟಲ್ ಗೋಧಿ ಅವಶ್ಯಕತೆಯಿದ್ದು ಅಗತ್ಯ ದಾಸ್ತಾನು ಒದಗಿಸಲಾಗಿದೆ ಎಂದು ಹೇಳಿದರು.
2.70ಲಕ್ಷ ಬಡ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯ ಲಾಭ ದೊರೆಯಲಿದೆ. ಜಿಲ್ಲಾಡಳಿತ ಈಗಾಗಲೇ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಸಿದ್ದತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರ ವಿರೋಧಿಗಳು ಯೋಜನೆಯ ಬಗ್ಗೆ ಏನೇ ಟೀಕೆ ಮಾಡಿದರೂ ಅದನ್ನು ಲೆಕ್ಕಿಸದೇ ಅನ್ನಭಾಗ್ಯ ಜಾರಿಗೆ ತಂದಿದೆ. ಕಾಂಗ್ರೆಸ್ ಪಕ್ಷ ತನ್ನ ಬಡವರ ಪರ ಕಳಕಳಿ ವ್ಯಕ್ತಪಡಿಸಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು ಮಾತನಾಡಿ, ಅನ್ನಭಾಗ್ಯ ಯೋಜನೆಯನ್ನು ಜಿಲ್ಲೆಯ 706 ನ್ಯಾಯಬೆಲೆ ಅಂಗಡಿಗಳ ಮೂಲಕ 54124 ಅಂತ್ಯೋದಯ ಹಾಗೂ 2,16,650 ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ಅನ್ನಭಾಗ್ಯ: ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಶ್ಲಾಘನೀಯ. ಆದರೆ ಅಧಿಕಾರಿಗಳು ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಗಮನಕೊಡಬೇಕು. ಯೋಜನೆಗಳ ಅನುಷ್ಠಾನದಲ್ಲಿಯೇ ಅಧಿಕಾರಿಗಳು ಸಾಮಾನ್ಯವಾಗಿ ಎಡವುತ್ತಾರೆಂದು ಎಚ್ಚರಿಸಿದರು. ಸಮಾರಂಭದಲ್ಲಿ ಸಾಂಕೇತಿಕವಾಗಿ ಎಲ್ಲ ತಾಲೂಕುಗಳ ತಲಾ ಒಬ್ಬರು ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಈ ವೇಳೆ ಸಚಿವೆ ಉಮಾಶ್ರೀ ವಿತರಿಸಿದರು.
ಸಮಾರಂಭದಲ್ಲಿ ಶಾಸಕರಾದ ಹಂಪಯ್ಯ ನಾಯಕ, ವೆಂಕಟೇಶ ನಾಯಕ, ಹಂಪನಗೌಡ ಬಾದರ್ಲಿ, ಪ್ರತಾಪಗೌಡ ಪಾಟೀಲ್, ಮಾನಪ್ಪ ವಜ್ಜಲ್, ಜಿಪಂ ಅಧ್ಯಕ್ಷೆ ಲಲಿತಮ್ಮ, ಉಪಾಧ್ಯಕ್ಷ ಶರಣಪ್ಪ, ಸಿಇಒ ಜ್ಞಾನಪ್ರಕಾಶ್, ಎಸ್ಪಿ ಎಸ್.ಬಿ. ಬಿಸನಳ್ಳಿ, ಸಹಾಯಕ ಆಯುಕ್ತೆ ಮಂಜುಶ್ರೀ, ಎಎಸ್ಪಿ ಡಾ.ದಿವ್ಯಾ ಗೋಪಿನಾಥನ್ ಉಪಸ್ಥಿತರಿದ್ದರು.
ಅಂಗನವಾಡಿ ಕೇಂದ್ರಗಳಿಗೆ ಸೌಲಭ್ಯ: ಸರ್ಕಾರ ಕ್ರಮ
ರಾಯಚೂರು: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ. ಜತೆಗೆ ಅಪೂರ್ಣಗೊಂಡಿರುವ ಅಂಗನವಾಡಿ ಕಟ್ಟಡಗಳಿಗೆ ಒದಗಿಸಿದ್ದ ಅನುದಾನ ಮರಳಿ ಪಡೆಯಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದರು.
ಕಾಲಮಿತಿ: ಅವರು ನಗರದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಎಲ್ಲ ರೀತಿಯ ಸೌಲತ್ತುಗಳನ್ನು ಒದಗಿಸುವ ಉದ್ದೇಶ ಸರ್ಕಾರದ್ದಾಗಿದೆ. ಈ ನಿಟ್ಟಿನಲ್ಲಿ ಅರ್ಧಂಬರ್ಧ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರಗಳ ಕಟ್ಟಡ ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯಾದ್ಯಂತ ಅಪೂರ್ಣಗೊಂಡಿರುವ ಕಟ್ಟಡಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಕುಡಿವ ನೀರು, ಪೀಠೋಪಕರಣಗಳನ್ನು ಒದಗಿಸುವ ಕಾರ್ಯಕ್ಕೆ ಅಗತ್ಯ ಚಿಂತನೆ ನಡೆದಿದೆ. ದೇವದುರ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಒದಗಿಸಿದ 20 ಕೋಟಿ ಬಳಕೆಯಾದ ಬಗ್ಗೆ ಸಮಗ್ರ ಮಾಹಿತಿ ಪಡೆದು ಕ್ರಮ ಜರುಗಿಸಲಾಗುತ್ತದೆ. ಅದೇ ರೀತಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳಿಗೆ ಒದಗಿಸುತ್ತಿರುವ ಮಾತ್ರೆಯಲ್ಲಿರುವ ಅಂಶಗಳ ಬಗ್ಗೆ ಪ್ರಯೋಗಾಲಯಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಶಾಸಕರಾದ ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ಬಸವರಾಜರೆಡ್ಡಿ, ರವೀಂದ್ರ ಜಲ್ದಾರ್ ಇದ್ದರು.