ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಕ್ಕಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಮಾತ್ರೆ

Lingaraj Badiger
Updated On : 18 Jul 2013, 11:09 am

ಕನ್ನಡಪ್ರಭ ವಾರ್ತೆ, ರಾಯಚೂರು, ಜು.17
ಮಕ್ಕಳ ಆರೋಗ್ಯ ಸುಧಾರಣೆಗೆ ಅವಶ್ಯಕವಾಗಿರುವ ಕಬ್ಬಿಣಾಂಶವಿರುವ ಮಾತ್ರೆಗಳ ವಿತರಣೆ ಯೋಜನೆ ಜಾರಿಗೆ ತಂದಿರುವ ಸರ್ಕಾರ ಶಾಲಾ ಮಕ್ಕಳ ಆರೋಗ್ಯ ಕಾಪಾಡಲು ಕ್ರಮ ಕೈಗೊಂಡಿದೆ. ಮಕ್ಕಳು ಕಬ್ಬಿಣಾಂಶವಿರುವ ಮಾತ್ರೆ ತಪ್ಪದೇ ಸೇವಿಸಿ ಉತ್ತಮ ಆರೋಗ್ಯ ಹೊಂದಲು ಜಿಪಂ ಅಧ್ಯಕ್ಷ ಲಲಿತಮ್ಮ ಕರೆ ನೀಡಿದರು.
ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಏರ್ಪಡಿಸಿದ್ದ ಕಬ್ಬಿಣಾಂಶವಿರುವ ಮಾತ್ರೆಗಳ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಹದಿಹರೆಯದ ಮಕ್ಕಳಲ್ಲಿ ರಕ್ತಹೀನತೆಯಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳು ಕಾಡುತ್ತವೆ. ಅದರಿಂದ ಮಕ್ಕಳನ್ನು ರಕ್ಷಿಸಲು ಸರ್ಕಾರ ಮಾತ್ರೆ ವಿತರಣೆಯ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದರು.
ಶೈಕ್ಷಣಿಕ ಪ್ರಗತಿ: ಜಿಪಂ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯ ಹನುಮೇಶ ಮದ್ಲಾಪುರ ಮಾತನಾಡಿ, ರಾಜ್ಯ ಸರ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅವುಗಳ ಪ್ರಯೋಜನ ಮಕ್ಕಳಿಗೆ ದೊರೆಯುವಂತಾಗಬೇಕಿದೆ. ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಮುಂದಾಗಬೇಕಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ ನಾಯಕ ಮಾತನಾಡಿ, ದೇಶದ ಎಲ್ಲ ರಾಜ್ಯಗಳಲ್ಲಿ ಕಬ್ಬಿಣಾಂಶವಿರುವ ಮಾತ್ರೆಗಳ ವಿತರಣೆ ಸಮಾರಂಭ ಏಕಕಾಲಕ್ಕೆ ಆಯೋಜಿಸಲಾಗಿದೆ. ರಾಜ್ಯದ 30 ಜಿಲ್ಲೆಗಳಲ್ಲಿ ಮಾತ್ರೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮಹಿಳೆಯರು, ಯುವಕ-ಯುವತಿಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ನಿವಾರಣೆಗೆ ಸರ್ಕಾರ ಮಾತ್ರೆ ವಿತರಣೆ ಕಾರ್ಯಕ್ರಮ ರೂಪಿಸಿದೆ. 6ನೇ ತರಗತಿಯಿಂದ 10ನೇ ತರಗತಿಯವರೆಗೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾತ್ರೆ ವಿತರಿಸಲಾಗುತ್ತದೆ ಎಂದು ಹೇಳಿದರು.
869 ಕೋಟಿ ವೆಚ್ಚ: ಜಿಲ್ಲೆಯಲ್ಲಿ 1.40 ಲಕ್ಷ ವಿದ್ಯಾರ್ಥಿಗಳು, 66,880 ಸಾವಿರ ಅಂಗನವಾಡಿ ಮಕ್ಕಳಿಗೆ ಒಟ್ಟು 1.4 ಕೋಟಿ ಮಾತ್ರೆಗಳನ್ನು ಸರ್ಕಾರ ವಿತರಿಸುತ್ತಿದೆ. ಈ ಯೋಜನೆಗೆ ಸರ್ಕಾರ 869 ಕೋಟಿ ವೆಚ್ಚ ಮಾಡುತ್ತಿದೆ. ಪ್ರತಿ ಸೋಮವಾರ ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಮಾತ್ರೆಗಳನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಲಿದ್ದಾರೆಂದು ಹೇಳಿದರು.
ಗ್ರಾಮೀಣ ಭಾಗದಿಂದ ಮಹಾನಗರಗಳವರೆಗೆ ಈ ಮಾತ್ರೆಗಳನ್ನು ವಿತರಿಸುವ ಯೋಜನೆ ಜಾರಿಗೆ ತರಲಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯ ಯಶಸ್ಸಿಗೆ ಎಲ್ಲರೂ ಮುಂದಾಗುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಶಂಕ್ರಪ್ಪ ಮಾತನಾಡಿದರು.
ಜಿಪಂ ಸಿಇಒ ಜ್ಞಾನಪ್ರಕಾಶ್, ಪ್ರಭಾರಿ ಡಿಡಿಪಿಐ ಚಂದ್ರಶೇಖರ್ ದೊಡ್ಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ರೋಹಿಣಿ ಹಿರೇಮಠ, ಬಿಇಒ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು. ಶಾಲಾ ಮಕ್ಕಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement