'ಜನತೆಗೆ ಯೋಜನೆಗಳ ಲಾಭ ತಲುಪಿಸಿ'
ದೇವದುರ್ಗ: ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಶಾಸಕ ಎ. ವೆಂಕಟೇಶ ನಾಯಕ ತಿಳಿಸಿದರು.
ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಮ್ಮ ಆಡಳಿತ ಅವಧಿಯಲ್ಲಿ ಅಧಿಕಾರಿಗಳಿಗೆ ಕಿರುಕುಳ ನೀಡುವುದಿಲ್ಲ. ಆದರೆ ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದು ಅವಶ್ಯ. ಈ ನಿಟ್ಟಿನಲ್ಲಿ ನಿರ್ಲಕ್ಷಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಪಂ ಸಿಇಒ ಜ್ಞಾನಪ್ರಕಾಶ ಸಭೆಯಲ್ಲಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ದೂರು ಹಾಗೂ ಕೆಲಸಕ್ಕಾಗಿ 1800-425-8666 ಇಲ್ಲಿಗೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದ ಅವರು, ವಸತಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಹಣ ನೀಡುವಲ್ಲಿ ವಿಳಂಬ ಮಾಡದಂತೆ ಆದೇಶಿಸಿದರು. ಈ ಸಂದರ್ಭದಲ್ಲಿ ತಾಪಂ ಇಒ ಡಾ. ನಾಮದೇವ ರಾಠೋಡ್, ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ ಭಟ್ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.