ಕೆರೆ ಅವ್ಯವಹಾರವಾಗಿದ್ದರೆ ಕ್ರಮ: ತಂಗಡಗಿ
ವಿಧಾನಸಭೆ: ಯಾದಗಿರಿ ಸುರಪುರ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಹೊಸ ಕೆರೆ ನಿರ್ಮಾಣವಾಗಿದ್ದು, ಅಲ್ಲಿ ಅವ್ಯವಹಾರ ನಡೆದಿದ್ದರೆ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಣ್ಣ ನೀರಾವರಿ ಖಾತೆ ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದರು.
ರಾಜಾ ವೆಂಕಟಪ್ಪ ನಾಯಕ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬೂದಿಹಾಳ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ 89.99 ಲಕ್ಷ ವೆಚ್ಚ ಮಾಡಲಾಗಿದೆ. ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದರು.
ಈ ಕಾಮಗಾರಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಇದರ ತನಿಖೆ ಆಗಬೇಕು ಎಂದು ರಾಜಾ ವೆಂಕಟಪ್ಪ ನಾಯಕ ಆಗ್ರಹಿಸಿದರು.
ಮುಖ್ಯ ಎಂಜಿನಿಯರ್ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲಾಗುತ್ತದೆ. ಯಾರೇ ತಪ್ಪು ಮಾಡಿದ್ದರೂ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.