ಇಂದು ವಿಶ್ವ ಪರಿಸರ ದಿನಾಚರಣೆ
ರಾಯಚೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ ಮತ್ತು ರಿಮ್ಸ್ ವೈದ್ಯಕೀಯ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಜೂ. 5ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗ್ಗೆ 9ಕ್ಕೆ ನಗರದ ರಿಮ್ಸ್ ಕಾಲೇಜಿನ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಸಮಾರಂಭ ಆಯೋಜಿಸಿದ್ದು, ಸಮಾರಂಭವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಆರ್.ಜೆ. ಸತೀಶ್ ಸಿಂಗ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಾ ಪಾಂಡುರಂಗ ನಾಯಕ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜ್, ಎಸ್ಪಿ ಎಸ್.ಬಿ. ಬಿಸನಳ್ಳಿ, ಜಿಪಂ ಸಿಇಒ ಜ್ಞಾನಪ್ರಕಾಶ್, ಮುಖ್ಯ ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಮಹಮ್ಮದ್ ಮುಜಾಹಿದುಲ್ಲಾ, ಸಹಾಯಕ ಆಯುಕ್ತೆ ಮಂಜುಶ್ರೀ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಅತಿಥಿ ಉಪನ್ಯಾಸಕಾರರಾಗಿ ರಿಮ್ಸ್ ಕಾಲೇಜಿನ ಉಪನ್ಯಾಸಕ ಡಾ. ಸಿ.ಡಿ. ಪಾಟೀಲ್ ಆಗಮಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಗುಟ್ಕಾ ನಿಷೇಧ; ಸ್ವಾಗತ
ಲಿಂಗಸ್ಗೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುಟ್ಕಾ ಮಾರಾಟ ನಿಷೇಧ ಮಾಡಿರುವುದು ಸ್ವಾಗತಾರ್ಹ ಕ್ರಮ ಎಂದು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬಸವಂತರಾಯ ಕುರಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ನ ನಿರ್ದೇಶನದಂತೆ ಗುಟ್ಕಾ ಮಾರಾಟ ನಿಷೇಧ ಕ್ರಮ ಕೈಗೊಂಡಿದ್ದು, ಗುಟ್ಕಾ ಸೇವನೆಯಿಂದ ಜನಸಾಮಾನ್ಯರ ಹಾಗೂ ಯುವ ಜನತೆಯ ಮೇಲೆ ಅನೇಕ ದುಷ್ಪರಿಣಾಮಗಳು ಬೀರುವ ಜೊತೆಗೆ ಅವರ ಶಕ್ತಿ ಕುಂದಿಸುತ್ತಿತ್ತು. ಈ ನಿಟ್ಟಿನಲ್ಲಿ ಗುಟ್ಕಾ ನಿಷೇಧ ಮಾಡಿರುವುದು ಸಂತಸ ಮೂಡಿಸಿದೆ. ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಗುಟ್ಕಾ ಮಾರಾಟ ಪುನಃ ಆರಂಭಿಸಬಾರದು. ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಪರ್ಯಾಯ ಯೋಜನೆ ರೂಪಿಸಬೇಕೆಂದು ಒತ್ತಾಯಿಸಿದ್ದಾರೆ.