ಸಾಹಿತ್ಯ ಸಮ್ಮೇಳನ; ಅದ್ಧೂರಿ ಮೆರವಣಿಗೆ
ಕನ್ನಡಪ್ರಭ ವಾರ್ತೆ ರಾಯಚೂರು ಜೂ.8
ಮಾನವಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶನಿವಾರ ಮಾನವಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.
ಮಾನವಿ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಾಜಿ ಶಾಸಕ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಬೋಸರಾಜು ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಹಂಪಯ್ಯ ನಾಯಕ ಅವರು ಕನ್ನಡ ಧ್ವಜಾರೋಹಣ ಮತ್ತು ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ್ ಮಸ್ಕಿ ಅವರು ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾನವಿ ಪಟ್ಟಣದ ಬಸವೇಶ್ವರ ವೃತ್ತದಿಂದ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರದ ಹಾಗೂ ಸಮ್ಮೇಳನಾಧ್ಯಕ್ಷ ಎಚ್. ಪಂಪಯ್ಯ ಶೆಟ್ಟಿ ಅವರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹಾಗೂ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಂಡಿದ್ದವು. ಮೆರವಣಿಗೆಯು ಸಮ್ಮೇಳನ ಸ್ಥಳ ವಾಸವಿ ಕಲ್ಯಾಣ ಮಂಟಪದರೆಗೆ ವಿಜೃಂಭಣೆಯಿಂದ ನೆರವೇರಿತು.