ಆರ್‌ಟಿಇ: ಖಾಸಗಿ ಶಾಲೆ ವಿರುದ್ಧ ಕ್ರಮಕ್ಕೆ ಆಗ್ರಹ
ರಾಯಚೂರು: ಶಿಕ್ಷಣ ಹಕ್ಕು ಕಾಯಿದೆ ಅಡಿ ನಗರದ ರೇಸ್ ಬಚಪನ್ ಶಾಲೆಯಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡದೇ ಕಿರುಕುಳ ನೀಡಲಾಗುತ್ತಿದೆ ಎಂದು ಹೈ.ಕ. ವಿಮೋಚನಾ ವೇದಿಕೆ ಆರೋಪಿಸಿದೆ.
ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರಿತ್ತಿರುವ ವೇದಿಕೆಯ ಜಿಲ್ಲಾ ಸಂಯೋಜಕ ಕೆ.ಪಿ. ಅನಿಲಕುಮಾರ್ ಅವರು, 2009ರ ಶಿಕ್ಷಣ ಹಕ್ಕು ಕಾಯಿದೆ ಅಡಿಯಲ್ಲಿ ನಗರದ ರೇಸ್ ಬಚಪನ್ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಆದರೆ 6 ಸಾವಿರ ಶುಲ್ಕವನ್ನು ಪಾಲಕರು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕಗಳನ್ನು ಪಡೆಯುವಂತೆ ಶಾಲೆಯ ಆಡಳಿತ ಒತ್ತಾಯಿಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಕೂಡಲೇ ಆಡಳಿತ ಈ ನಿಟ್ಟಿನಲ್ಲಿ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆ ತಪ್ಪಿಸಬೇಕು. ಖಾಸಗಿ ಶಾಲೆಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.