ರಿಮ್ಸ್: ಹೆಚ್ಚುವರಿ ಅನುದಾನಕ್ಕೆ ಶೀಘ್ರ ಪ್ರಸ್ತಾವ
ರಾಯಚೂರು: ರಾಜ್ಯ ಸರ್ಕಾರ ಪ್ರತಿ ವರ್ಷ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅನುದಾನ ನೀಡುತ್ತಿದೆ. ಆದರೆ ಈ ಬಾರಿ ಹೆಚ್ಚುವರಿಯಾಗಿ 36 ಕೋಟಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ನಗರ ಕ್ಷೇತ್ರದ ಶಾಸಕ ಡಾ. ಶಿವರಾಜ್ ಪಾಟೀಲ್ ಹೇಳಿದರು.
ನಗರದ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಗುರುವಾರ ಭೇಟಿ ನೀಡಿ ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿ ಜೂ. 22ರಂದು ಜಿಲ್ಲೆಗೆ ಆಗಮಿಸುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಹೆಚ್ಚುವರಿ ಅನುದಾನಕ್ಕೆ ಬೇಡಿಕೆ: ರಿಮ್ಸ್ ಬೋಧಕ ಆಸ್ಪತ್ರೆಗೆ ಎಲ್ಲ ಸೌಲತ್ತುಗಳನ್ನು ಒದಗಿಸಿ ಶೀಘ್ರ ಸ್ಥಳಾಂತರಿಸಲಾಗುತ್ತದೆ. ಬೋಧಕ ಮತ್ತು ಬೋಧಕೇತರ ನೌಕರರ ನೇಮಕ, ವಿದ್ಯಾರ್ಥಿಗಳಿಗೆ ಮತ್ತು ರೋಗಿಗಳಿಗೆ ಗುಣಮಟ್ಟದ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಹೆಚ್ಚುವರಿ ಅನುದಾನಕ್ಕೆ ಬೇಡಿಕೆಯಿರಿಸಲಾಗುವುದು ಎಂದು ತಿಳಿಸಿದರು.
ರಿಮ್ಸ್ ಬೋಧಕ ಆಸ್ಪತ್ರೆ ಹೊಸ ಕಟ್ಟಡ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಲಿಫ್ಟ್, ಕಂಪೋನೆಂಟ್ ಥೆರೆಪಿ, ಚಿಕಿತ್ಸೆ ಕೊಠಡಿಗಳಿಗೆ ವಿದ್ಯುತ್ ಸಂಪರ್ಕ ಇತರ ಕೆಲಸ ಜಾರಿಯಲ್ಲಿದ್ದು, ಈ ಎಲ್ಲ ಕಾಮಗಾರಿ ಮುಂದಿನ ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಒಪೆಕ್ ಪುನಾರಂಭ- ಚರ್ಚಿಸಿ ನಿರ್ಧಾರ: ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೊರತೆಯ ಹಿನ್ನೆಲೆ ಎಂಸಿಐ ಪ್ರವೇಶಕ್ಕೆ ಅವಕಾಶ ನೀಡಿಲ್ಲ.
ಹೊರಗುತ್ತಿಗೆ ಆಧಾರದಲ್ಲಿ ಶೀಘ್ರವೇ 100 ಜನ ಶುಶ್ರೂಷಕಿಯರು ಹಾಗೂ 12 ಜನ ಬೋಧಕರನ್ನು ನಿಯೋಜಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಿ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ಒಪೆಕ್ ಪುನಾರಂಭ ಮತ್ತು 186 ಸಿಬ್ಬಂದಿ ನೇಮಕದ ಬಗ್ಗೆ ಜಿಲ್ಲೆಯ ಶಾಸಕ, ಮುಖಂಡರು ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರಿಮ್ಸ್ ಪ್ರಭಾರಿ ನಿರ್ದೇಶಕ ಬಸವರಾಜ ಬಿರಾಪುರ, ಪಿಡಬ್ಲ್ಯೂಡಿ ಎಂಜಿನಿಯರ್ ಮಲ್ಲಿಕಾರ್ಜುನ ಮೇಟಿ ಮತ್ತು ಸಿಬ್ಬಂದಿ ವರ್ಗ ಮತ್ತು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.