ಕೃಷಿ ವಿವಿಗೆ ಸಚಿವರ ಭೇಟಿ; ಅಭಿವೃದ್ಧಿ ಪರಿಶೀಲನೆ
ರಾಯಚೂರು: ನಗರದ ರಾಯಚೂರು ಕೃಷಿ ವಿವಿಗೆ ಭಾನುವಾರ ಕೃಷಿ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.
ಕೃಷಿ ವಿವಿಯ ಕೃಷಿ ತಾಂತ್ರಿಕ ಮಹಾವಿದ್ಯಾಲಯ, ಕೃಷಿ ಮಹಾವಿದ್ಯಾಲಯ, ಜೈವಿಕ ಇಂಧನ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ಕೃಷಿ ವಿವಿ ಕುಲಪತಿ ಡಾ.ಬಿ.ವಿ. ಪಾಟೀಲ್ ಅವರಿಂದ ಮಾಹಿತಿ ಪಡೆದರು. ವಿವಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಅವಶ್ಯಕತೆಗಳ ಬಗ್ಗೆ ಈ ವೇಳೆ ವಿವಿ ಆಡಳಿತದಿಂದ ಮನವರಿಕೆ ಮಾಡಿಕೊಡಲಾಯಿತು.
ನಂತರ ಅವರು ಕೃಷಿ ವಿವಿ ಅಧಿಕಾರಿಗಳ ಜತೆ ಸಭೆ ನಡೆಸಿ ಅವಶ್ಯಕತೆಗಳ ಬಗ್ಗೆ ಚರ್ಚಿಸಿದರು. ಈ ವೇಳೆ ಕೃಷಿ ವಿವಿಯ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕೃಷಿ ವಿವಿ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.