ಕುಡಿವ ನೀರು; ಸೇರ್ಪಡೆಗೆ ಒತ್ತಾಯ
ರಾಯಚೂರು: ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿವಿಧ ಗ್ರಾಮಗಳಿಗೆ ರಾಜೀವಗಾಂಧಿ ರಾಷ್ಟ್ರೀಯ ಕುಡಿಯುವ ನೀರಿನ ಯೋಜನೆ ಅಡಿ ಸಮರ್ಪಕ ನೀರು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದ ಘಟಕ ಒತ್ತಾಯಿಸಿದೆ.
ಈ ಕುರಿತು ಇತ್ತೀಚೆಗೆ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿರುವ ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ಮೊಹಮ್ಮದ್ ನಿಜಾಮುದ್ದೀನ್, ತಾಲೂಕಿನ ಯರಗೇರಾ, ತುಂಟಾಪುರ, ಗೋನವಾರ, ಕಮಲಾಪುರ, ಮಂಜರ್ಲಾ, ಗಧಾರ, ಮಾಸದೊಡ್ಡಿ, ಜುಲುಮಗೇರಾ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆಯಿದ್ದು ಅದರ ಪರಿಹಾರ ಕಾರ್ಯ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಗ್ರಾಮಗಳಿಗೆ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಿಂದ ಶುದ್ಧ ಕುಡಿಯುವ ನೀರೊದಗಿಸುವ ನಿಟ್ಟಿನಲ್ಲಿ ಕೂಡಲೇ ಈ ಗ್ರಾಮಗಳನ್ನು ರಾಜೀವಗಾಂಧಿ ರಾಷ್ಟ್ರೀಯ ಕುಡಿಯುವ ನೀರಿನ ಯೋಜನೆ ವ್ಯಾಪ್ತಿಗೆ ಸೇರಿಸುವಂತೆ ಅವರು ಒತ್ತಾಯಿಸಿದ್ದಾರೆ.