ಅಕ್ರಮ ಮತದಾನ ತಡೆಗೆ ಕ್ರಮ: ಡಿಸಿ
ಕನ್ನಡಪ್ರಭ ವಾರ್ತೆ, ರಾಯಚೂರು, ಮಾ.5
ನಗರ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಅಕ್ರಮ ತಡೆಗೆ ಜಿಲ್ಲಾಡಳಿತ ತಡೆಗೆ ಅಗತ್ಯ ಕ್ರಮ ಕೈಗೊಂಡಿದೆ. ಒಂದಕ್ಕಿಂತ ಹೆಚ್ಚಿನ ವಾರ್ಡುಗಳ ಮತದಾರರ ಪಟ್ಟಿಯಲ್ಲಿ ಒಬ್ಬನೇ ವ್ಯಕ್ತಿಯ ಹೆಸರು ಪತ್ತೆಯಾದರೆ ಅಥವಾ ಆ ಬಗ್ಗೆ ದೂರುಗಳು ಬಂದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಹೇಳಿದರು.
ನಗರದಲ್ಲಿ ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ನಗರದ 11ನೇ ವಾರ್ಡಿನಲ್ಲಿ ಒಬ್ಬನೇ ಮತದಾರನ ಹೆಸರು ಎರಡೂ ಭಾಗಗಳ ಮತದಾರರ ಯಾದಿಯಲ್ಲಿ ಸೇರ್ಪಡೆಗೊಳಿಸಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಈ ಮತದಾರರ ಪಟ್ಟಿಯ ಪುನಾ ಪರಿಶೀಲನೆ ನಡೆಸಲಾಗಿದೆ. ಮೃತರಾದವರ, ಬೇರೆಡೆ ಸ್ಥಳಾಂತರಗೊಂಡವರ ಹಾಗೂ ಮತದಾನ ಮಾಡದಂಥ ವ್ಯಕ್ತಿಗಳ ಹೆಸರು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಿಳಿಸಿದರು.
ನಗರದ 11ನೇ ವಾರ್ಡಿನಲ್ಲಿ ಕಂಡುಬಂದ ಈ ರೀತಿಯ ಅಕ್ರಮದ ಹಿನ್ನೆಲೆಯಲ್ಲಿ ಮತದಾನದ ವೇಳೆ ಆ ವಾರ್ಡಿನಲ್ಲಿ ಹೆಚ್ಚುವರಿ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ. ಇಂಥ ಅಕ್ರಮ ಗುರುತಿಸಲು ಅವರಿಗೆ ಸೂಚಿಸಲಾಗಿದೆ. ಜಿಲ್ಲೆಯ ಎಲ್ಲೆಡೆ ಅಕ್ರಮ ಮತದಾನ ತಡೆಗೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬೇರೆ ಬೇರೆ ವಾರ್ಡ್ಗಳ ಮತದಾರರ ಯಾದಿಯಲ್ಲಿ ಒಬ್ಬನೇ ವ್ಯಕ್ತಿ ಹೆಸರು ಸೇರಿಸಿದ್ದು ಪತ್ತೆಯಾದರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಅದಕ್ಕೆ 6 ತಿಂಗಳ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಅದರಿಂದ ಮುಂದಿನ ದಿನಗಳಲ್ಲಿ ನಡೆಯುವ ಮತದಾನದ ಅಕ್ರಮಕ್ಕೆ ತಡೆಯೊಡ್ಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮಾ.7 ರಂದು ಜಿಲ್ಲೆಯಲ್ಲಿ ನಡೆಯಲಿರುವ ನಗರ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಚುನಾವಣೆಯಲ್ಲಿ ಒಟ್ಟು 1603 ಜನ ಸಿಬ್ಬಂದಿಯನ್ನು ನೇಮಿಸಿದ್ದು, 361 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. 361 ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಲಾಗುತ್ತದೆ. ಒಟ್ಟು ಯಂತ್ರಗಳ ಶೇ.5ರಷ್ಟು ಮತಯಂತ್ರಗಳನ್ನು ಮುಂಜಾಗ್ರತೆ ಕ್ರಮವಾಗಿ ಕಾಯ್ದಿರಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಮತದಾನದಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಲಾಗಿದೆ. ಚುನಾವಣೆಯನ್ನು ಸುಗಮ ಮತ್ತು ಶಾಂತಿಯುತವಾಗಿ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮತದಾರರು ಯಾವುದೇ ಆಮಿಷ, ಆಸೆಗೆ ಬಲಿಯಾಗದೇ ಸೂಕ್ತ ಅಭ್ಯರ್ಥಿಯ ಆಯ್ಕೆಗೆ ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು.
ಪ್ರಸಕ್ತ ಚುನಾವಣೆಯಲ್ಲಿ ಮತದಾರರ ಗುರುತಿನ ಚೀಟಿಯಷ್ಟೇ ಅಲ್ಲದೇ 14 ವಿವಿಧ ಮತದಾರರ ಭಾವಚಿತ್ರವಿರುವ ಇನ್ನಿತರೆ ಗುರುತಿನ ಚೀಟಿಗಳನ್ನು ಮತದಾನಕ್ಕೆ ಪರಿಗಣಿಸಲಾಗುತ್ತದೆ. ಇನ್ನೂ ಅನೇಕರು ಮತದಾರರ ಗುರುತಿನ ಚೀಟಿ ಪಡೆದಿಲ್ಲವಾದ್ದರಿಂದ ಪರ್ಯಾಯ ಗುರುತಿನ ಚೀಟಿಗಳ ಬಳಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ಸದ್ಯಕ್ಕೆ ಎಲ್ಲಿಯೂ ಕಂಡುಬಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಅಭಾವದ ಬಗ್ಗೆ ಜಿಪಂನಿಂದ ಮಾಹಿತಿ ತರಿಸಿಕೊಳ್ಳಲಾಗುತ್ತಿದೆ. ಎಂಜಿನಿಯರ್ಗಳು ವಸ್ತುಸ್ಥಿತಿಯ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ವರದಿಯಾಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲಾಡಳಿತದ ಬಳಿ ಕುಡಿಯುವ ನೀರಿನ ಕಾಮಗಾರಿಗಳಿಗೆ 8 ಕೋಟಿ ಅನುದಾನ ಲಭ್ಯವಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಇದುವರೆಗೆ ನೀತಿ ಸಂಹಿತೆ ಉಲ್ಲಂಘನೆಯ 8 ಪ್ರಕರಣಗಳನ್ನು ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ಗಳಲ್ಲಿ ಚುನಾವಣೆಯ ಹಿನ್ನೆಲೆ ಸಂಚರಿಸುವ ವಾಹನಗಳ ಮೇಲೆ ನಿಗಾಯಿರಿಸಲು ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾಗಿ ತಿಳಿಸಿದ್ದಾರೆಂದು ಹೇಳಿದರು.