ಏಕಾಗ್ರತೆಯಿದ್ದಲ್ಲಿ ಗುರಿ ಸಾಧನೆ
ರಾಯಚೂರು: ಆತ್ಮವಿಶ್ವಾಸ ಮತ್ತು ಏಕಾಗ್ರತೆಯಿಂದ ಮಾತ್ರ ನಿರ್ದಿಷ್ಟ ಗುರಿ ತಲುಪಲು ಸಾಧ್ಯ ಎಂದು ಖ್ಯಾತ ಮನೋವೈದ್ಯ ಡಾ. ವಿ.ಎ. ಮಾಲಿಪಾಟೀಲ್ ಹೇಳಿದರು.
ನಗರದಲ್ಲಿ ಟಾಗೋರ್ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಶಾವಂತಗೇರಿ ಬಸವರಾಜ ಪಾಟೀಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದಿಂದ ಆಯೋಜಿಸಿದ್ದ ಪರೀಕ್ಷೆ ಎದುರಿಸುವಲ್ಲಿ ಮನೋಬಲ ಮತ್ತು ಧೈರ್ಯ ಎಂಬ ವಿಷಯದ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಕನಿಷ್ಠ 6 ಗಂಟೆ ನಿದ್ದೆ ಮಾಡಬೇಕು. ಪರೀಕ್ಷೆಯಲ್ಲಿ ಮೊದಲಿಗೆ ಸರಳ ಪ್ರಶ್ನೆಗಳಿಗೆ ಉತ್ತರಿಸಿ ನಂತರದಲ್ಲಿ ಕ್ಲಿಷ್ಟಕರ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆರ್.ಕೆ. ಅಮರೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆಯಲು ಮನವಿ ಮಾಡಿದರು.
ಸಮಾರಂಭದಲ್ಲಿ ಮಾಚನೂರು ಮಲ್ಲಿಕಾರ್ಜುನ, ಪ್ರಾಚಾರ್ಯ ಆರ್.ಶ್ರೀಧರ್, ಸದಸ್ಯ ಭೀಮನಗೌಡ ಇಟಗಿ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.