12ರಂದು ಮಾಧ್ಯಮ ಅಕಾಡೆಮಿ ವಿಚಾರ ಸಂಕಿರಣ
ರಾಯಚೂರು: ಕರ್ನಾಟಕ ಮಾಧ್ಯಮ ಅಕಾಡೆಮಿ, ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ ಮಾ.12 ರಂದು ನಗರದಲ್ಲಿ 371(ಜೆ) ಕಲಂ ಅನುಷ್ಠಾನ ಹಾಗೂ ಮಾಧ್ಯಮ ಕುರಿತ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ನಗರದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಮಾಧ್ಯಮ ಅಕಾಡೆಮಿ ಸದಸ್ಯ ಚನ್ನಬಸವಣ್ಣ, ಅಂದು ನಗರದ ಜಿಪಂ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಶಿವನಗೌಡ ನಾಯಕ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆಂದು ತಿಳಿಸಿದರು. ಮಾಧ್ಯಮ ಅಕಾಡೆಮಿ ರಾಜ್ಯಾಧ್ಯಕ್ಷ ಎಂ.ಎ. ಪೊನ್ನಪ್ಪ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಪ್ರಧಾನ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಸಂಸದರಾದ ಧರಂಸಿಂಗ್, ಸಣ್ಣಫಕೀರಪ್ಪ, ಜಿಪಂ ಅಧ್ಯಕ್ಷೆ ಲಲಿತಮ್ಮ, ಹಟ್ಟಿ ಗಣಿ ಕಂಪನಿಯ ಅಧ್ಯಕ್ಷ ರಾಮಚಂದ್ರಪ್ಪ, ಡಾ. ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ತ್ರಿವಿಕ್ರಮ್ ಜೋಷಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಶಂಕ್ರಪ್ಪ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಗಸ್ತಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ಶಾಸಕ ಸೈಯದ್ ಯಾಸೀನ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ನಡೆಯುವ ಮೊದಲ ಗೋಷ್ಠಿಯಲ್ಲಿ 371ನೇ ಕಲಂ (ಜೆ) ಅನುಷ್ಠಾನದಡಿ ಪ್ರಾದೇಶಿಕ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಎಂಬ ವಿಷಯದ ಕುರಿತು ದಿ ಹಿಂದೂ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ಟಿ.ವಿ. ಶಿವಾನಂದನ್ ವಿಷಯ ಮಂಡಿಸಲಿದ್ದಾರೆ. ಹಿರಿಯ ಪತ್ರಕರ್ತ ಮೃತ್ಯುಂಜಯ ಕಪಗಲ್, ಸಂಪಾದಕ ಎನ್.ನಾಗರಾಜ ಮಾತನಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಪಾದಕ ಬಸವರಾಜಸ್ವಾಮಿ ವಹಿಸುವರೆಂದು ಹೇಳಿದರು.
ಎರಡನೇ ಗೋಷ್ಠಿಯಲ್ಲಿ ಮಧ್ಯಾಹ್ನ 2.30ಕ್ಕೆ ಹೈ.ಕ. ಅಭಿವೃದ್ಧಿ ಆಗಿದ್ದೇನು ಆಗಬೇಕಾದ್ದೇನು ಎಂಬ ವಿಷಯದ ಕುರಿತು ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್ ವಿಷಯ ಮಂಡಿಸಲಿದ್ದಾರೆ. ವಾದಿರಾಜ ವ್ಯಾಸಮುದ್ರ, ಬಿ.ವೆಂಕಟಸಿಂಗ್ ಮಾತನಾಡಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ಕೆ.ರಾಮಕೃಷ್ಣ ವಹಿಸಲಿದ್ದಾರೆಂದು ತಿಳಿಸಿದರು.
ಅದೇ ದಿನ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಸರಾಜಾ ರಾಯಪ್ಪ ನಾಯಕ, ಮಾಜಿ ಸಚಿವ ವೈಜನಾಥ ಪಾಟೀಲ್, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಗಂಗಾಧರ ಮೊದಲಿಯಾರ್, ರಾಜ್ಯ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ, ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು, ಜಿಪಂ ಸಿಇಒ ಜ್ಞಾನಪ್ರಕಾಶ್, ಎಸ್ಪಿ ಎಸ್.ಬಿ.ಬಿಸನಳ್ಳಿ ಪಾಲ್ಗೊಳ್ಳಲಿದ್ದು, ಅಧ್ಯಕ್ಷತೆಯನ್ನು ಮಾಧ್ಯಮ ಅಕಾಡೆಮಿ ಅಧ್ಯಕ್ಷ ಪೊನ್ನಪ್ಪ ವಹಿಸಲಿದ್ದಾರೆಂದು ಹೇಳಿದರು.
ಈ ವಿಚಾರ ಸಂಕಿರಣದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಐದು ನೂರಕ್ಕೂ ಹೆಚ್ಚಿನ ಸಂಖ್ಯೆಯ ಪತ್ರಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಾಧ್ಯಮ ಅಕಾಡೆಮಿ ಮತ್ತು ಹಟ್ಟಿ ಗಣಿ ಕಂಪನಿಗಳ ಆರ್ಥಿಕ ನೆರವಿನಲ್ಲಿ ಈ ಸಮಾರಂಭ ಆಯೋಜಿಸಲಾಗಿದೆ ಎಂದರು.
ಈ ಸಂದರ್ಭ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಜಯರಾಂ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.