ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಹಿಳಾ ದೌರ್ಜನ್ಯ; ತುರ್ತು ಕ್ರಮಕ್ಕೆ ಒತ್ತಾಯಿಸಿ ಮನವಿ

Lingaraj Badiger
Updated On : 15 Mar 2013, 10:44 am

ಕನ್ನಡಪ್ರಭ ವಾರ್ತೆರಾಯಚೂರು ಮಾ.14
ಮಹಿಳೆಯರ ಮೇಲಿನ ಎಲ್ಲ ರೀತಿಯ ದೌರ್ಜನ್ಯ ಪ್ರಕರಣಗಳ ತನಿಖೆ ಮತ್ತು ಪ್ರಕರಣ ದಾಖಲಾತಿ ಶೀಘ್ರ ಆಗಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸೇರಿ ವಿವಿಧ ಸಂಘಟನೆಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದವು.
ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಚುಡಾಯಿಸುವುದು, ಮಾನಭಂಗ, ಪೀಡನೆ, ಅತ್ಯಾಚಾರಗಳಂಥ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ದೂರು ದಾಖಲಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆ ತ್ವರಿತವಾಗಿ ಕಾರ್ಯನಿರ್ವಹಿಸಬೇಕು. ಹಾಗೆಯೇ ತನಿಖೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವ ಮೂಲಕ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಕಾರ್ಯ ಮಾಡಬೇಕಿದೆ ಎಂದು ಒತ್ತಾಯಿಸಿದರು.
ಅತ್ಯಾಚಾರಕ್ಕೊಳಗಾದವರಿಗೆ ಮಹಿಳಾ ವೈದ್ಯರಿಂದ ತಪಾಸಣೆಗೊಳಪಡಿಸಬೇಕು. ಅವರು ಬಯಸಿದಲ್ಲಿ ಅವರು ಬಯಸುವ ವೈದ್ಯರನ್ನು ಜತೆಗಿರಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಪೊಲೀಸ್ ಅಧಿಕಾರಿಗಳು ದೌರ್ಜನ್ಯದ ಘಟನೆಗಳು ಯಾವುದೇ ಪೊಲೀಸ್ ಠಾಣೆಯಲ್ಲಿ ಸಂಭವಿಸಿದರೂ ಮಹಿಳೆ ತೆರಳುವ ಠಾಣೆಯಲ್ಲಿ ದೂರು ದಾಖಲಿಸುವ ಕಾರ್ಯ ಮಾಡಬೇಕೆಂದರು.
ಎಲ್ಲ ಪೊಲೀಸ್ ಠಾಣೆಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಿಸಬೇಕು. ದೌರ್ಜನ್ಯ ಪ್ರಕರಣಗಳ ತನಿಖೆಯ ವೇಳೆ ಸಾಮಾಜಿಕ ಕಾರ್ಯಕರ್ತರ ಹಾಗೂ ಮಾನಸಿಕ ತಜ್ಞರ ನೆರವು ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಮಾಧ್ಯಮಗಳಲ್ಲಿ ಮಹಿಳೆಯನ್ನು ಅಶ್ಲೀಲವಾಗಿ ಚಿತ್ರಿಸುವುದನ್ನು ತಡೆಯಬೇಕು. ಅಶ್ಲೀಲ ದೃಶ್ಯಗಳನ್ನು ತೆಗೆದು ಹಾಕುವ ಕಾರ್ಯ ಮಾಡಬೇಕಿದೆ. ಮಹಿಳೆಯರು ಮತ್ತು ಮಕ್ಕಳ ಸಹಾಯವಾಣಿಯನ್ನು ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ಚೇತನಾ ಬನಾರೆ, ಮಹೇಶ್ ಚೀಕಲಪರ್ವಿ, ಚನ್ನಬಸವ ಜಾನೇಕಲ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement