ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶಿಸ್ತುಬದ್ಧ ಜೀವನ ನಡೆಸಿ

Lingaraj Badiger
Updated On : 23 Mar 2013, 10:46 am

ಕನ್ನಡಪ್ರಭ ವಾರ್ತೆ ರಾಯಚೂರು ಮಾ.22
ಮಕ್ಕಳು ದೈಹಿಕವಾಗಿ ಬಲಿಷ್ಠರಾಗಿರಬೇಕು. ಜತೆಗೆ ಶಿಸ್ತುಬದ್ಧ ಜೀವನ ನಡೆಸುವ ಮೂಲಕ ದೇಶದ ಉತ್ತಮ ಪ್ರಜೆಗಳಾಗುವಂತೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಕರೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಯುನಿಸೆಫ್ ಮತ್ತಿತರೆ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಬಾಲಕಾರ್ಮಿಕ ಪುನರ್ವಸತಿ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಲ್ಲಿ ಕ್ರೀಡಾ ಮನೋಭಾವ ಅಗತ್ಯ. ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚೆಚ್ಚು ತೊಡಗುವಂತೆ ಪಾಲಕರು ಪ್ರೋತ್ಸಾಹಿಸುವ ಅವಶ್ಯಕತೆಯಿದೆ ಎಂದರು.
ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ: ಜಿಲ್ಲೆಯಲ್ಲಿರುವ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿರುವುದು ಶ್ಲಾಘನೀಯ ಸಂಗತಿಯಾಗಿದೆ. ಈ ಮೂಲಕ ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ದೊರೆಯಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 9 ಬಾಲಕಾರ್ಮಿಕ ಪುನರ್ವಸತಿ ಶಾಲೆಗಳ ಆರಂಭಕ್ಕೆ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೇ ವೇಳೆ ಜಿಲ್ಲೆಯಲ್ಲಿ ಕೂಲಿಕಾರ್ಮಿಕರ ಕುಟುಂಬಗಳು ಗುಳೆ ಹೋಗುವುದನ್ನು ತಪ್ಪಿಸುವ ಕಾರ್ಯವಾಗಬೇಕಿದೆ. ಆಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಿಯಂತ್ರಿಸಲು ಸಾಧ್ಯ ಎಂದರು.
ಕ್ರೀಡೆಯಲ್ಲಿ ಪಾಲ್ಗೊಳ್ಳಿ: ಮಕ್ಕಳು ಸದೃಢರಾದರೆ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ತೀರಾ ಅವಶ್ಯ ಎಂದು ಜಿಲ್ಲಾಧಿಕಾರಿ ನಾಗರಾಜು ಸಲಹೆ ನೀಡಿದರು.
ಈ ವೇಳೆ ತಾಲೂಕು ಮಟ್ಟದಲ್ಲಿ ನಡೆದ ಕ್ರೀಡಾಕೂಟಗಳ ವಿಜೇತರಿಗೆ ಜಿಲ್ಲಾಧಿಕಾರಿ ನಾಗರಾಜು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರು ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.
ಸಮಾರಂಭದಲ್ಲಿ ಅಬಕಾರಿ ಇಲಾಖೆ ಉಪ ಆಯುಕ್ತ ವೆಂಕಟರಮಣಯ್ಯ, ಕಾರ್ಖಾನೆಗಳ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಮಿಶ್ರಿಕೋಟಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಬಿ. ಕಣಬರಗಿ, ಯುನಿಸೆಫ್‌ನ ಜಿಲ್ಲಾ ಸಂಯೋಜನಾಧಿಕಾರಿ ರಾಘವೇಂದ್ರ ಭಟ್, ಅಜಿತ್ ಕುಮಾರ್, ಶಾಂತಾರಾಮ್ ಹೆಗಡೆ ಸೇರಿದಂತೆ ಅನೇಕರಿದ್ದರು.
ಈ ವೇಳೆ ಜಿಲ್ಲೆಯ ವಿವಿಧ ಬಾಲಕಾರ್ಮಿಕ ಪುನರ್ವಸತಿ ಶಾಲೆಗಳಿಂದ ಆಗಮಿಸಿದ್ದ ಕ್ರೀಡಾಳುಗಳು ಆಕರ್ಷಕ ಪಥ ಸಂಚಲನ ನಡೆಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಬಾಲಕಾರ್ಮಿಕ ಶಾಲೆಗಳ ಮಕ್ಕಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement