ಕಾಂಗ್ರೆಸ್-ಬಿಜೆಪಿ ಮಧ್ಯೆ ಮಾರಾಮಾರಿ, ಕಲ್ಲು ತೂರಾಟ
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಬುಧವಾರ ರಾತ್ರಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟದಲ್ಲಿ ತೊಡಗಿದ್ದ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪ್ರಚಾರಕ್ಕೆ ತೆರಳಿದ್ದ ವೇಳೆ ಪರಸ್ಪರ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಉದ್ರಿಕ್ತರು ಕಲ್ಲು ತೂರಾಟದಲ್ಲಿ ತೊಡಗಿದ್ದಾಗ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದರು.
ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಪ್ರಚಾರಕ್ಕೆ ತೆರಳಿದ ವೇಳೆ ಈ ಘಟನೆ ನಡೆದಿದ್ದು, ಕಲ್ಲು ತೂರಾಟದಲ್ಲಿ ಅವರ ಕಾರು ಜಖಂಗೊಂಡಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದು, ಪೊಲೀಸರ ಕಾವಲು ಹಾಕಲಾಗಿದೆ. ಘಟನೆ ಕುರಿತು ಗಬ್ಬೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.