ವಿವಿಧೆಡೆ ಕಾರ್ಮಿಕರ ದಿನಾಚರಣೆ
ಕ.ಪ್ರ. ವಾರ್ತೆ ರಾಯಚೂರು ಮೇ 1
ನಗರದಲ್ಲಿ ಬುಧವಾರ ರಾಯಚೂರು ಜಿಲ್ಲಾ ಲಘು ಮೋಟಾರ್ ವಾಹನ ಚಾಲಕರ ಸಂಘದಿಂದ ಕಾರ್ಮಿಕರ ದಿನಾಚರಣೆ ಆಚರಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಂ.ಡಿ.ಹನೀಫ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳ ಸದುಪಯೋಗಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಸೇರಿದಂತೆ ಸದಸ್ಯರು ಇದ್ದರು.
ಸಿಐಟಿಯು ಕಚೇರಿಯಲ್ಲಿ: ನಗರದ ಸಿಐಟಿಯು ಸಂಘಟನೆಯ ಕಚೇರಿಯಲ್ಲಿ ಬುಧವಾರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.ತಾಲೂಕು ಅಧ್ಯಕ್ಷ ವೈ.ಈರಣ್ಣ ಅವರು, ಧ್ವಜಾರೋಹಣ ನೆರವೇರಿಸಿದರು. ಸಂಘಟನೆಯ ಅಧ್ಯಕ್ಷೆ ಎಚ್.ಪದ್ಮಾ, ವಿಮಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ರವಿ ಮಾತನಾಡಿದರು.
ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಬುಧವಾರ ರಾತ್ರಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟದಲ್ಲಿ ತೊಡಗಿದ್ದ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪ್ರಚಾರಕ್ಕೆ ತೆರಳಿದ್ದ ವೇಳೆ ಪರಸ್ಪರ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಉದ್ರಿಕ್ತರು ಕಲ್ಲು ತೂರಾಟದಲ್ಲಿ ತೊಡಗಿದ್ದಾಗ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಪ್ರಚಾರಕ್ಕೆ ತೆರಳಿದ ವೇಳೆ ಈ ಘಟನೆ ನಡೆದಿದ್ದು, ಕಲ್ಲು ತೂರಾಟದಲ್ಲಿ ಅವರ ಕಾರು ಜಖಂಗೊಂಡಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದ್ದು, ಪೊಲೀಸರ ಕಾವಲು ಹಾಕಲಾಗಿದೆ. ಘಟನೆ ಕುರಿತು ಗಬ್ಬೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.