ಅಕ್ರಮ ತಡೆಗೆ ಮುಂದಾದ ಪೊಲೀಸರ ಮೇಲೆಯೇ ಹಲ್ಲೆ
ಕ.ಪ್ರ. ವಾರ್ತೆ , ದೇವದುರ್ಗ , ಮೇ 4
ಮತದಾರರಿಗೆ ಹಣ ಹಂಚುತ್ತಿದ್ದಾರೆಂಬ ಮಾಹಿತಿ ಮೇರೆಗೆ ಅಕ್ರಮ ತಡೆಗೆ ಮುಂದಾದ ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಿದ ಘಟನೆ ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಘಟನೆಯಲ್ಲಿ ಪಿಎಸ್ಸೈ ಆನಂತ ವಸಂತ ಟಕ್ಕಣ್ಣವರ್, ಬಸವಂತ್ರಾಯ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಪಂಪಾಪತಿ ಎಂಬುವವರಿಗೆ ಗಾಯಗಳಾಗಿವೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತ ಬಸವರಾಜ ಮಟ್ಲ ಸೇರಿದಂತೆ 22 ಮಂದಿ ವಿರುದ್ಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆ ವಿವರ: ಮರ್ಕಂದಿನ್ನಿ ಮುಖ್ಯರಸ್ತೆ ಸಮೀಪದ ಹೊಲವೊಂದರಲ್ಲಿ ಮತದಾರರಿಗೆ ಅಕ್ರಮವಾಗಿ ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದೇವದುರ್ಗ ಸಂಚಾರ ಪೊಲೀಸ್ ಠಾಣೆಯ ಪಿಎಸ್ಸೈ ಆನಂದ್ ವಸಂತ ಟಕ್ಕಣ್ಣವರ್ ಸೇರಿ ನಾಲ್ವರ ತಂಡ ತಪಾಸಣೆಗೆ ಮುಂದಾಗಿತ್ತು.
ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಅವರೊಂದಿಗೆ ವಾಗ್ವಾದಕ್ಕಿಳಿದ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಜೀವ ಬೆದರಿಕೆಯೊಡ್ಡಿದ್ದಾರೆ. ಕಲ್ಲು ತೂರಾಟದಿಂದ ಸಿಬ್ಬಂದಿಗೆ ಗಾಯಗಳಾಗಿವೆ.
ಕಾರ್ಯಕರ್ತರ ಮಧ್ಯೆ ಘರ್ಷಣೆ: ತಾಲೂಕಿನ ಕಾಕರಗಲ್ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದ್ದು, ಪರಸ್ಪರರು ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.