'ನೀರಿನ ಸಮಸ್ಯೆ: ದೀರ್ಘಾವಧಿ ಯೋಜನೆಗಳ ಜಾರಿಗೆ ಸೂಚನೆ'
ರಾಯಚೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದ್ದು, ಅದರ ಪರಿಣಾಮಕಾರಿ ನಿವಾರಣೆಗೆ ದೀರ್ಘಾವಧಿಯ ಯೋಜನೆಗಳ ಜಾರಿ ಅಗತ್ಯ. ಇಂತಹ ಯೋಜನೆಗಳನ್ನು ಹಮ್ಮಿಕೊಳ್ಳುವತ್ತ ಅಧಿಕಾರಿಗಳು ಗಮನ ಹರಿಸಬೇಕೆಂದು ಜಿಪಂ ಅಧ್ಯಕ್ಷೆ ಲಲಿತಮ್ಮ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಅಧಿಕಾರಿಗಳ ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಇಂತಹ ದಿನಗಳಲ್ಲಿ ತಾತ್ಕಾಲಿಕ ವ್ಯವಸ್ಥೆಗಳ ಮೂಲಕ ಜನಸಾಮಾನ್ಯರಿಗೆ ನೀರು ಒದಗಿಸುವುದರ ಜತೆಗೆ ಸಂಬಂಧಿಸಿದ ಗ್ರಾಮಗಳಲ್ಲಿಯೇ ಶಾಶ್ವತವಾಗಿ ನೀರು ಲಭಿಸುವ ಯೋಜನೆಗಳನ್ನು ರೂಪಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ನಿವಾರಿಸಲು ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಬೇಕು. ಸಮಸ್ಯೆ ಇರುವ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕೂಡಲೇ ಸಮಸ್ಯೆ ನಿವಾರಣೆಗೆ ಯತ್ನಿಸಬೇಕು ಎಂದು ಅಧಿಕಾರಿಗಳಿಗೆ ಅವರು ಆದೇಶಿಸಿದರು.
ನಂತರ ವಿವಿಧ ಇಲಾಖೆಗಳ ಕಾಮಗಾರಿಗಳ ಪ್ರಗತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷ ಕೆ.ಶರಣಪ್ಪ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.