ಅನ್ನಭಾಗ್ಯ ಅಕ್ರಮ: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ಕ.ಪ್ರ. ವಾರ್ತೆ ರಾಯಚೂರು ನ.12
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಸಮಗ್ರ ತನಿಖೆ ನಡೆಸಿ ಅಕ್ರಮದಲ್ಲಿ ಭಾಗಿಯಾದವರನ್ನು ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಆರ್ವೈಎಫ್ಐ ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಮೂಲಕ ಆಹಾರ ಇಲಾಖೆಯ ಆಯುಕ್ತರು ಹಾಗೂ ಆಹಾರ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಈಚೆಗೆ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸೇರಿದ ಅಕ್ಕಿಯ ಕಾಳಸಂತೆ ಮಾರಾಟ ಮತ್ತು ಅಕ್ರಮ ಸಾಗಣೆಯ ದಂಧೆ ಎಗ್ಗಿಲ್ಲದೇ ಸಾಗಿದೆ. ಅದರ ತಡೆಗೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದರು.
ಸಮಗ್ರ ತನಿಖೆ ನಡೆಸಿ: ಜಿಲ್ಲೆಯ ಎಲ್ಲ ಐದು ತಾಲೂಕುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡುವ ಗುತ್ತಿಗೆ ಪಡೆದಿರುವವರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣಗಳು ಸಿಂಧನೂರು ಮತ್ತು ಲಿಂಗಸ್ಗೂರುಗಳಲ್ಲಿ ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಶಾಮೀಲಾಗಿರುವ ಗುತ್ತಿಗೆದಾರರು ಹಾಗೂ ಇನ್ನಿತರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರಕರಣ ದಾಖಲಿಸಿ: ಅನ್ನಭಾಗ್ಯ ಯೋಜನೆಯ ಅಕ್ಕಿಯ ಕಳ್ಳಸಾಗಣೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಅಂಥವರ ಪತ್ತೆಗೆ ಕ್ರಮ ಕೈಗೊಂಡು ಪ್ರಕರಣ ದಾಖಲಿಸಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು.
ಆಹಾರ ಇಲಾಖೆಯ ಅಧಿಕಾರಿಗಳ ಹಾಗೂ ಆಹಾರ ಧಾನ್ಯ ಸರಬರಾಜುದಾರರ ದೂರವಾಣಿ ಕರೆಗಳ ಮಾಹಿತಿ ದಾಖಲಿಸಿ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರನ್ನು ಪತ್ತೆ ಮಾಡಿ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದರು.
ಈ ವೇಳೆ ಸಂಘಟನೆಯ ಪ್ರಮುಖರಾದ ಬಸವರಾಜ ಕವಿತಾಳ, ನಾಗರಾಜ್ ಪೂಜಾರ್, ಬಸವರಾಜ ಹಿರೇಮನಿ, ಕೆ. ರವಿಕುಮಾರ್, ರಮೇಶ ನಾಯಕ್, ಎನ್. ವೀರೇಶ್, ಸಂತೋಷ್, ರಾಜ್, ಮಂಜುನಾಥ್, ರುದ್ರಪ್ಪ, ನಾಗರಾಜ್ ದೇವದುರ್ಗ ಸೇರಿ ಅನೇಕರಿದ್ದರು.