ಸಮಸ್ಯೆ ಪರಿಹಾರಕ್ಕೆ ಆಗ್ರಹ: ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು: ಮಾನವಿ ಪಟ್ಟಣದಲ್ಲಿ ಶುಕ್ರವಾರ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿಢೀರ್ ಪ್ರತಿಭಟನೆ ನಡೆಸಿದರು.
ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ಅಗತ್ಯ ಸೌಲಭ್ಯಗಳ ಕೊರತೆಯಿದೆ. ವಸತಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ದೊರೆಯುತ್ತಿಲ್ಲ. ಆಹಾರದಲ್ಲಿ ಗುಣಮಟ್ಟವನ್ನು ಕಾಪಾಡುತ್ತಿಲ್ಲ. ದೈನಂದಿನ ಬಳಕೆಗೆ ಅಗತ್ಯ ಸಾಮಗ್ರಿ ಒದಗಿಸಿಲ್ಲ ಎಂದು ಆರೋಪಿಸಿದರು.
ಶೈಕ್ಷಣಿಕ ವರ್ಷದ ಅರ್ಧ ಭಾಗ ಮುಗಿದರೂ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕ ನೀಡಿಲ್ಲ. ಶಾಲೆಯಲ್ಲಿ ಶೌಚಾಲಯ, ಸ್ನಾನದ ಕೊಠಡಿಯಿಲ್ಲ. ಈ ಕುರಿತು ಮೇಲಧಿಕಾರಿಗಳಿಗೆ ಅನೇಕ ಬಾರಿ ದೂರಿತ್ತರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಿಸಿಎಂ ಇಲಾಖೆಯ ಅಧಿಕಾರಿ ಸಂತೋಷ್ ಹಾಗೂ ವಸತಿ ಶಾಲೆಯ ಪ್ರಾಚಾರ್ಯರು, ಸೋಮವಾರದೊಳಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಹೋರಾಟ ಹಿಂಪಡೆದರು. ಪ್ರತಿಭಟನೆಗೆ ಕರ್ನಾಟಕ ರೈತ ಸಂಘದ ಮುಖಂಡ ನಾಗಲಿಂಗಸ್ವಾಮಿ, ಆರ್‌ವೈಎಫ್‌ಐನ ಅಶೋಕ ತಡಕಲ್, ನರಸಿಂಹ ಮತ್ತಿತರರು ಪಾಲ್ಗೊಂಡಿದ್ದರು.